ಇಸ್ಲಾಮಾಬಾದ್ : 26/11 ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಎ-ತೈಬಾ (ಎಲ್‌ಇಟಿ) ಸಂಸ್ಥಾಪಕ ಹಫೀಜ್ ಸಯೀದ್‌ನನ್ನು ಹಸ್ತಾಂತರಿಸುವಂತೆ ಭಾರತದ ಮನವಿಯನ್ನು ಪಾಕಿಸ್ತಾನ ಸ್ವೀಕರಿಸಿದೆ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಶುಕ್ರವಾರ ತಿಳಿಸಿದ್ದಾರೆ.
ಹಫೀಜ್ ನನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರವಾಗಿ ಹೇಳಿಕೆ ನೀಡಿದ ಬಲೋಚ್ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ, ಹಾಗಾಗಿ ಹಫೀಜ್ ನನ್ನು ಭಾರತಕ್ಕೆ ಹಸ್ತಾಂತರ ಮಾಡುವುದು ಅಸಾಧ್ಯ ಎಂದು ಹೇಳಿದ್ದಾರೆ.
ಹಫೀಜ್ ಸಯೀದ್ ಹಲವು ಭಯೋತ್ಪಾದಕ ಪ್ರಕರಣಗಳಲ್ಲಿ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದಾನೆ. ಪಾಕಿಸ್ತಾನದಲ್ಲಿರುವ ಸಯೀದ್‌ನನ್ನು ಹಸ್ತಾಂತರಿಸುವ ಬೇಡಿಕೆಗೆ ಸಂಬಂಧಿಸಿದ ದಾಖಲೆಗಳನ್ನು ಇತ್ತೀಚೆಗೆ ಇಸ್ಲಾಮಾಬಾದ್‌ಗೆ ಕಳುಹಿಸಲಾಗಿತ್ತು.
ಮುಮ್ತಾಜ್ ಝಹ್ರಾ ಬಲೂಚ್ ಅವರು ತಮ್ಮ ಹೇಳಿಕೆಯಲ್ಲಿ, ‘ಹಫೀಜ್ ಸಯೀದ್‌ನನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಸ್ತಾಂತರಿಸುವಂತೆ ಪಾಕಿಸ್ತಾನವು ಭಾರತೀಯ ಅಧಿಕಾರಿಗಳಿಂದ ಮನವಿಯನ್ನು ಸ್ವೀಕರಿಸಿದೆ. ಪಾಕಿಸ್ತಾನ ಮತ್ತು ಭಾರತದ ನಡುವೆ ಯಾವುದೇ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಗಮನಿಸುವುದು ಸೂಕ್ತವಾಗಿದೆ’ ಎಂದು ತಿಳಿಸಿದ್ದಾರೆ.