Advertisement

ಮತ ಎಣಿಕೆಗೆ ಅಧಿಕಾರಿಗಳು, ಸಿಬ್ಬಂದಿ ನೇಮಕ

09:01 PM Nov 24, 2019 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಡಿ.9 ರಂದು ನಗರದ ಬಿಬಿ ರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆಯಲಿದ್ದು, ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು ಹಾಗೂ ಸಿಬ್ಬಂದಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಆರ್‌.ಲತಾ ತಿಳಿಸಿದರು.

Advertisement

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮತ ಎಣಿಕೆ ಕಾರ್ಯದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಮತ ಎಣಿಕೆ ಮೇಲ್ವಿಚಾರಕರು, ಮತ ಎಣಿಕೆ ಸಹಾಯಕ ಅಧಿಕಾರಿಗಳು ಹಾಗೂ ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದರು.

ಮತ ಎಣಿಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅಂದು ಬೆಳಗ್ಗೆ 5:30ಕ್ಕೆ ಮತ ಎಣಿಕೆ ಕೇಂದ್ರದಲ್ಲಿ ಹಾಜರಿರಬೇಕೆಂದರಲ್ಲದೇ ಚುನಾವಣೆಗೆ ನಿಯೋಜಿಸಿದ ಎಲ್ಲರಿಗೂ ಬೆಳಗ್ಗೆ ಉಪಾಹಾರ ಮತ್ತು ಮಧ್ಯಾಹ್ನ ಭೋಜನ ವ್ಯವಸ್ಥೆ ಏರ್ಪಡಿಸಲಾಗುತ್ತದೆ ಎಂದರು.

ಆಂಬ್ಯುಲೆನ್ಸ್‌, ಮೆಡಿಕಲ್‌ ಕಿಟ್‌ ವ್ಯವಸ್ಥೆ: ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮತ ಎಣಿಕೆ ಮಾಡುವಾಗ ಒಳಗೆ ಪ್ರವೇಶಿಸಲು ಚುನಾವಣಾ ಆಯೋಗ ನೀಡಿರುವ ಗುರುತಿನ ಪತ್ರ ಇದ್ದವರಿಗೆ ಮಾತ್ರ ಅವಕಾಶವಿದೆ. ಮತದಾನದ ದಿನದಂದು ಪ್ರತಿ ಬೂತ್‌ನಲ್ಲಿ ಆರೋಗ್ಯ ಇಲಾಖೆಯಿಂದ ಕಡ್ಡಾಯವಾಗಿ ಮೆಡಿಕಲ್‌ ಕಿಟ್‌ನ್ನು ಏರ್ಪಡಿಸಬೇಕೆಂದರಲ್ಲದೇ ಮತ ಎಣಿಕೆ ದಿನದಂದು ಇಲಾಖೆಯಿಂದ ಆಂಬ್ಯುಲೆನ್ಸ್‌ ಹಾಗೂ ಮೆಡಿಕಲ್‌ ಕಿಟ್‌ಗಳ ವ್ಯವಸ್ಥೆ ಕಲ್ಪಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯೋಗೇಶ್‌ಗೌಡಗೆ ಜಿಲ್ಲಾಧಿಕಾರಿ ತಿಳಿಸಿದರು.

ಸಮಯಕ್ಕೆ ಸರಿಯಾಗಿ ಬನ್ನಿ: ಉಪ ಚುನಾವಣೆ ವೀಕ್ಷಕರಾದ ಜೆ.ವೆಂಕಟಮುರುಳಿ ಮಾತನಾಡಿ, ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಮತ ಎಣಿಕೆ ಕಾರ್ಯವನ್ನು ಗೊಂದಲಗಳಿಗೆ ಅವಕಾಶ ಇಲ್ಲದಂತೆ ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಮತ ಎಣಿಕೆ ಕಾರ್ಯವನ್ನು ಸಂಪೂರ್ಣವಾಗಿ ವಿಡಿಯೋಗ್ರಫಿ ಮಾಡಿಸಬೇಕೆಂದರು.

Advertisement

ಪೊಲೀಸ್‌ ಬಂದೋಬಸ್ತ್: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿನವ ಖರೆ ಮಾತನಾಡಿ, ಮತ ಎಣಿಕೆ ದಿನ ಹಾಗೂ ಮತದಾನ ದಿನದಂದು ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಮಾಡಲಾಗುವುದು. ಸಾರ್ವಜನಿಕರು, ರಾಜಕೀಯ ಪಕ್ಷಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮತ ಎಣಿಕೆ ದಿನದಂದು ಅಗತ್ಯ ಪೊಲೀಸ್‌ ಬಂದೋಬಸ್ತ್ ಮಾಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ, ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ರಘುನಂದನ್‌, ಸಹಾಯಕ ಚುನಾವಣಾ ಅಧಿಕಾರಿಗಳಾದ ಕೆ.ನರಸಿಂಹಮೂರ್ತಿ, ಶ್ರೀನಿವಾಸ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್‌ ನಿಷೇಧ: ಉಪ ಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಅಭ್ಯರ್ಥಿಗಳು ಎಣಿಕೆ ಮೇಲ್ವಿಚಾರಕರು ಕಡ್ಡಾಯವಾಗಿ ಮೊಬೈಲ್‌ ಪೋನ್‌ಗಳ ಬಳಕೆ ಅಥವಾ ತರುವುದನ್ನು ನಿಷೇಧಿಸಲಾಗಿದೆ. ಮತ ಎಣಿಕೆಯ ಕೇಂದ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ನಗರಸಭೆ ಆಯುಕ್ತ ಡಿ.ಲೋಹಿತ್‌ ಕುಮಾರ್‌ಗೆ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ ಸೂಚಿಸಿದರು.

ಡಿ.5 ರಂದು ನಡೆಯುವ ಚಿಕ್ಕಬಳ್ಳಾಪುರ ಉಪ ಚುನಾವಣೆಯ ಮತ ಎಣಿಕೆ ಡಿ.9ರಂದು ನಗರದ ಬಿಬಿ ರಸ್ತೆಯಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿರುವ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನಡೆಯಲಿದ್ದು, ಮತ ಎಣಿಕೆಯಲ್ಲಿ ಭಾಗವಹಿಸುವ ಅಧಿಕಾರಿಗಳಿಗೆ, ಸಿಬ್ಬಂದಿಗೆ ಹಾಗೂ ವೀಕ್ಷಕರನ್ನು ನೇಮಕ ಮಾಡಲಾಗಿದೆ.
-ಆರ್‌.ಲತಾ, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next