ದೇವನಹಳ್ಳಿ: ಜಿಲ್ಲೆಯಲ್ಲಿ ಮೇ 21 ಮತ್ತು 22ರಂದು 6ರಿಂದ 8ನೇ ತರಗತಿ ಪದವೀದರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಎಲ್ಲಾ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 21 ಮತ್ತು 22ರಂದು 6 ರಿಂದ 8ನೇ ತರಗತಿ ಪದವೀದರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಕೊಠಡಿಗಳನ್ನು ಪರಿಶೀಲಿಸಿ ಮಾತನಾಡಿ, ಜಿಲ್ಲೆಯಲ್ಲಿ 870ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
ಟಿ.ಇ.ಟಿ. ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಈ ಪರೀಕ್ಷೆಯನ್ನು ಬರೆಯಲಿದ್ದಾರೆ. 161 ಹುದ್ದೆಗಳಿಗೆ ನೇಮಕಾತಿ ಆಗಬೇಕಾಗಿದೆ. ಜಿಲ್ಲೆಯಲ್ಲಿ 3 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಅದರಲ್ಲಿ ದೇವನಹಳ್ಳಿ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಸೂಲಿಬೆಲೆ ರಸ್ತೆಯ ಸರ್ಕಾರ ಬಾಲಕಿಯರ ಪ್ರೌಢಶಾಲೆ ಹಾಗೂ ಶಾಂತಿನಗರದ ಆಕ್ಸ್‌ಫರ್ಡ್ ಶಾಲೆಗಳನ್ನು ಪರೀಕ್ಷಾ ಕೇಂದ್ರಗಳಾಗಿ ಮಾಡಿದ್ದಾರೆ ಎಂದರು.
ಪರೀಕ್ಷೆಗೆ ಸಕಲ ಸಿದ್ಧತೆ: ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಪ್ರತಿ ಕೊಠಡಿಗಳಿಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ನಿಷೇಧಾಜ್ಞೆ ಜಾರಿ, ಮೊಬೈಲ್ ಬಳಕೆ ನಿಷೇಧ, ಬ್ಲೂಟೂತ್, ರಿಸ್ಟ್ ವಾಚ್ ಸೇರಿದಂತೆ ಇತರೆ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ನಿಷೇಧಿಸಲಾಗಿದೆ.
ಪರೀಕ್ಷೆಯ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸ ಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗುತ್ತದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ಯಾನರ್ ಪೂರೈಸುವುದು. ಪ್ರಶ್ನೆಪತ್ರಿಕೆಗಳನ್ನು ಸಾಗಿಸುವ ವಾಹನಗಳಿಗೆ ಪೊಲೀಸ್ ವ್ಯವಸ್ಥೆ ಒದಗಿಸಬೇಕು. ಯಾವುದೇ ಪರೀಕ್ಷಾ ಸಿಬ್ಬಂದಿ ಅಥವಾ ಅಧಿಕಾರಿಗಳಾಗಲಿ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಅಥವಾ ಇನ್ನಿತರೆ ಎಲೆಕ್ಟ್ರಿಕಲ್ ಉಪಕರಣಗಳನ್ನು ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದರು.
ಈ ವೇಳೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಮಾರೇಗೌಡ, ಉಪ ನಿರ್ದೇಶಕರ ಕಚೇರಿಯ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ದೇವನಹಳ್ಳಿ ಬಿಇಒ ಕೊಟ್ರೇಶ್, ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್, ಪ್ರಭಾರ ಉಪಪ್ರಾಂಶುಪಾಲ ಬಸವರಾಜ್ ಕೆಂಚನಗೌಡ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆದರ್ಶ್, ಪರಿಸರ ಅಭಿಯಂತರೆ ನೇತ್ರಾವತಿ, ಆರೋಗ್ಯ ನಿರೀಕ್ಷಕಿ ಶ್ರೀದೇವಿ ಸೇರಿದಂತೆ ಅನೇಕರು ಹಾಜರಿದ್ದರು.