ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಗ್ರಹದ ಜೊತೆಗೆ ಸೋಂಕಿತರ ಸಾವಿನ ಪ್ರಮಾಣ ತಗ್ಗಿಸುವುದಕ್ಕಾಗಿ ಸಂಬಂಧಪಟ್ಟ ಆಸ್ಪತ್ರೆಗಳ ವೈದ್ಯರು ವಿಶೇಷ ಗಮನ ನೀಡುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬುಧವಾರ ಕೋವಿಡ್-19 ನಿಯಂತ್ರಣ ಕುರಿತು ಜಿಲ್ಲಾ ಜಾಗೃತ-ತಜ್ಞರ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲೆಯ ವಿವಿಧ ಆಸ್ಪತ್ರೆಗಳ ವೈದ್ಯರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಅವರು ಈ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಪರಿಣಾಮಕಾರಿ ಚಿಕಿತ್ಸೆ ಒದಗಿಸಬೇಕು. ಕೋವಿಡ್ ಸೋಂಕಿತರಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಹೆಚ್ಚಿನ ಸಾವು ಆಗದಂತೆ ನೋಡಿಕೊಳ್ಳಲು ವಿಶೇಷ ಗಮನ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರೆಮ್ಡಿಸಿವಿಯರ್ ಲಸಿಕೆ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಇದರ ಸಮರ್ಪಕ ನಿರ್ವಹಣೆಗಾಗಿ ನಿಯೋಜಿತ ಅಧಿಕಾರಿಗಳಾದ ಡಾ| ಔದ್ರಾಮ್ ಹಾಗೂ ಸಹಾಯಕ ಔಷಧ ನಿಯಂತ್ರಕರು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಸಮಸ್ಯೆ ನಿವಾರಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಕೋವಿಡ್ ವಿಷಯದಲ್ಲಿ ಯಾವುದೇ ಸಮಸ್ಯೆಗಳ ಕಂಡು ಬಂದರೂ ತಕ್ಷಣ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಅವರ ಗಮನಕ್ಕೆ ತಂದು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಪ್ರಸ್ತುತ ಜಿಲ್ಲೆಯಲ್ಲಿರುವ ಪರಿಸ್ಥಿತಿ-ವಾಸ್ತವಾಂಶ ಆಧಾರದ ಮೇಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ವೆಂಟಿಲೇಟರ್‌ಗಳ ಸಮರ್ಪಕ ನಿರ್ವಹಣೆ ಮಾಡಿಕೊಳ್ಳಬೇಕು. ಐಸಿಯು ನಿರ್ವಹಣಾ ತಂತ್ರಜ್ಞರನ್ನು ಜಿಲ್ಲಾಸ್ಪತ್ರೆಗೆ ಪಡೆದುಕೊಳ್ಳಬೇಕು. ಅವಶ್ಯಕ ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳ ಸಹಕಾರದ ಜೊತೆಗೆ ಸಮರ್ಪಕ ಸಿಬ್ಬಂದಿಗಳು ಇರುವಂತೆ ನೋಡಿಕೊಂಡು ಐಸಿಯು ಘಟಕ ನಿರ್ವಹಿಸಲು ಸೂಚನೆ ನೀಡಿದರು.
ಸರ್ಕಾರದ ನಿರ್ದೇಶನದಂತೆ ಗುತ್ತಿಗೆ ಆಧಾರದ ಮೇಲೆ ನರ್ಸ್, ಲ್ಯಾಬ್ ಟೆಕ್ನಿಷಿಯನ್ ಹಾಗೂ ಅವಶ್ಯಕ ಸಿಬ್ಬಂದಿಗಳ ಪಾರದರ್ಶಕ ನೇಮಕಾತಿಗೆ ವಿಶೇಷ ಗಮನ ನೀಡಬೇಕು. ಪ್ರತಿ ದಿನ ಬರುತ್ತಿರುವ ಸುತ್ತೋಲೆಗಳ ಬಗ್ಗೆ ನಿರಂತರ ಗಮನ ಹರಿಸಬೇಕು. ಅಲ್ಲದೇ ತಕ್ಷಣ ಕ್ರಮ ಕೈಗೊಳ್ಳಲು ಮುಂದಾಗಬೇಕು. ಕೆಳ ಹಂತದ ಸಿಬ್ಬಂದಿಗಳನ್ನು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಮೇಲಧಿಕಾರಿಗಳು ಸ್ಫೂರ್ತಿ ತುಂಬುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಗೋವಿಂದರೆಡ್ಡಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಎಎಸ್ಪಿ ರಾಮ ಅರಿಸಿದ್ದಿ, ಸರ್ಕಾರಿ ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ| ಶರಣಪ್ಪ ಕಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜಕುಮಾರ ಯರಗಲ್, ಡಾ| ಲಕ್ಕಣ್ಣನರ ಸೇರಿದಂತೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.