ಹಾಸನ: ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಪುನರ್ವಸತಿ ಕಾರ್ಯಗಳಿಗೆ ಪ್ರಮುಖ ಆದ್ಯತೆ ನೀಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ನೆರೆ ಹಾವಳಿಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವರು ವಿಳಂಬ ಮಾಡದೇ ತುರ್ತಾಗಿ ನೆರೆ ಪರಿಹಾರ ಕಾಮಗಾರಿಗಳನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮನೆ ನಿರ್ಮಾಣ ಕಾರ್ಯ ತ್ವರಿತವಾಗಲಿ: ಸಂತ್ರಸ್ತರನ್ನು ಹೆಚ್ಚು ದಿನಗಳ ಕಾಲ ನಿರಾಶ್ರಿತರ ಕೇಂದ್ರಗಳಲ್ಲಿ ಉಳಿಸದೇ ತ್ವರಿತವಾಗಿ ಮನೆಗಳ ನಿರ್ಮಾಣ ಕಾರ್ಯವನ್ನು ಶೀಘ್ರವಾಗಿ ಆರಂಭಿಸಬೇಕು. ಮನೆಗಳ ನಿರ್ಮಾಣದ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದ ಕಂದಾಯ ಸಚಿವರು ತಾಕೀತು ಮಾಡಿದರು.
ಪ್ರಸ್ತಾವನೆ ಸಲ್ಲಿಸಿ: ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ತುರ್ತಾಗಿ ಕಾಮಗಾರಿ ಗಳನ್ನು ಪೂರ್ಣಗೊಳಿಸಬೇಕು. ಯಾವುದಾದರೂ ಜಿಲ್ಲೆಗಳಲ್ಲಿ ಪುನರ್ವಸತಿ ಕಾರ್ಯಕ್ಕೆ ಹೆಚ್ಚಿನ ಪರಿಹಾರ ಧನದ ಅಗತ್ಯವಿದ್ದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಎನ್‌ಡಿಆರ್‌ಎಫ್ ಮಾರ್ಗಸೂಚಿ ಪಾಲನೆ: ವಿಡಿಯೋ ಸಂವಾದ ಸಭೆಯ ನಂತರ ಮಾತ ನಾಡಿದ ಡೀಸಿ ಆರ್. ಗಿರೀಶ್ ಅವರು, ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಜಿಲ್ಲೆಯಲ್ಲಿ ಉಳಿಕೆ ಇರುವ 39 ಶಾಲೆಗಳಿಗೆ ಹಾಗೂ ಹಾನಿ ಗೊಳಗಾಗಿರುವ 191 ಅಂಗನವಾಡಿ ಕೇಂದ್ರಗಳ ದುರಸ್ತಿ ಕಾರ್ಯ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಬಿ.ಎ.ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ, ಲೊಕೋಪ ಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿ.ಎಸ್.ಮಂಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಪ್ರಕಾಶ್, ಜಂಟಿ ಕೃಷಿ ನಿರ್ದೇಶಕ ಮಧು ಸೂಧನ್, ಪಿಆರ್‌ಇಡಿಯ ಕಾರ್ಯಪಾಲಕ ಎಂಜಿನಿಯರ್ ಆನಂದ್‌ಕುಮಾರ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.