ಮದ್ದೂರು: ಕೊಪ್ಪ ಜಿಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನವನ್ನು ಬಿಡು ಗಡೆಗೊಳಿಸಿ, ಮಾದರಿ ಕ್ಷೇತ್ರವನ್ನಾಗಿಸಲು ಮುಂದಾಗಿದ್ದೇವೆ ಎಂದು ಶಾಸಕ ಕೆ. ಸುರೇಶ್‌ಗೌಡ ತಿಳಿಸಿದರು.
ತಾಲೂಕಿನ ಕೊಪ್ಪ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿಕುಡಿಯುವ ನೀರು, ರಸ್ತೆ, ವಿದ್ಯುತ್ ದೀಪ ಹಾಗೂ ಇನ್ನತರ ಮೂಲ ಸೌಲಭ್ಯ ಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.
ಸರ್ಕಾರದಿಂದ ಅನುದಾನ ತಡೆ: ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರಕ್ಕೆ ಬಿಡುಗಡೆಗೊಳಿಸಿದ್ದ 700 ಕೋಟಿ ರೂ.ಅನುದಾನವನ್ನು ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಸರ್ಕಾರ ತಡೆಹಿಡಿದಿದ್ದಾರೆ. ಇದರಿಂದಾಗಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಅಲ್ಲದೆ, ಪ್ರಗತಿಯಲ್ಲಿದ್ದ ಕಾಮಗಾರಿಗಳು ಅಪೂರ್ಣಗೊಂಡಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜಿಲ್ಲೆ ಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ದೂರಿದರು.
ಸಮರ್ಪಕ ಮಾಹಿತಿ ನೀಡಿಲ್ಲ: ಜಿಲ್ಲೆಯ ಯಾವೊಬ್ಬ ಶಾಸಕರಿಗೂ ಜಿಲ್ಲಾಡಳಿತ ಸಮರ್ಪಕವಾದ ಮಾಹಿತಿ ನೀಡದೆ, ವಿಳಂಬ ಮಾಡುತ್ತಿದೆ. ಜಿಲ್ಲಾಧಿಕಾರಿಗಳು ಏಕಪಕ್ಷೀಯ ನಿರ್ಧಾರ ಕೈಗೊಂಡು ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ತಮ್ಮದೇ ದಾಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಯೋಜನೆ ಬಳಕೆ ಮಾಡಿಕೊಳ್ಳಿ: ಜಿಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಪಿಡಿಒ ಹಾಗೂ ಸಂಬಂಧಿಸಿದ ಅಧಿಕಾರಿ ಗಳಿಗೆ ಸೂಚಿಸಿದ್ದರೂ, ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಅಲ್ಲದೆ, ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.
ಗ್ರಾಮದಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಪ್ರತಿ ಗ್ರಾಮಕ್ಕೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಈಗಾಗಲೇ ಕಾಮಗಾರಿ ಪ್ರಗತಿ ಹಂತದಲ್ಲಿದೆ. ಸ್ಥಳೀಯ ರೈತರ ಬೇಸಾಯಕ್ಕೆ ಯಾವುದೇ ತೊಂದರೆ ಉಂಟಾಗದಂತೆ ಕುಡಿಯುವ ನೀರು ಪೂರೈಕೆ ಮಾಡಲು ಅಗತ್ಯ ಕ್ರಮ ವಹಿಸುವುದಾಗಿ ತಿಳಿಸಿದರು.