Advertisement
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳಿಗೆ ಈ ಅನುದಾನ ಬಿಡುಗಡೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Related Articles
Advertisement
ಮಳೆಯಿಂದಾಗಿ ಕೊಡಗಿನಲ್ಲಿ ಇಬ್ಬರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಕೊಡಗಿನಲ್ಲಿ ಮಳೆಯಿಂದಾಗಿ ವಿರಾಜಪೇಟೆಯ ಗ್ರಾಮವೊಂದು ದ್ವೀಪದಂತಾಗಿ ಗ್ರಾಮಸ್ಥರು ಅಲ್ಲೇ ಉಳಿದಿದ್ದು, ಸೇನೆಯ ರಕ್ಷಣೆ ಕೋರಲಾಗಿದೆ. ಅದರಂತೆ ಅವರನ್ನು ರಕ್ಷಿಸಲು ಹೆಲಿಕಾಪ್ಟರ್‌ಗಳು ಸಿದ್ಧವಾಗಿದೆಯಾದರೂ ಹವಾಮಾನ ವೈಪರೀತ್ಯದಿಂದ ಕಾರ್ಯಾಚರಣೆ ಸಾಧ್ಯವಾಗಿಲ್ಲ. ಶುಕ್ರವಾರ ಅವರನ್ನು ರಕ್ಷಿಸಲಾಗುವುದು. ಗ್ರಾಮದಲ್ಲಿ ಉಳಿದಿರುವವರಿಗೆ ಆಹಾರ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಮಳೆಹಾನಿ ಬಗ್ಗೆ ಇನ್ನೆರಡು ದಿನಗಳಲ್ಲಿ ಜಿಲ್ಲಾಧಿಕಾರಿಗಳ ವರದಿ ಸರ್ಕಾರದ ಕೈಸೇರಲಿದ್ದು, ಅದನ್ನು ಆಧರಿಸಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಲ್ಲದೆ, ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದ್ದು, ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಆಯಾ ಜಿಲ್ಲೆಗೆ ಕಳುಹಿಸಿಕೊಟ್ಟಿದ್ದಾರೆ. ಈ ಅಧಿಕಾರಿಗಳು ಅಲ್ಲಿಯೇ ಇದ್ದು ಪರಿಹಾರ ಕಾಮಗಾರಿಗಳ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದರು.
ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಹವಾಮಾನ ವೈಪರೀತ್ಯದಿಂದ ವೈಮಾನಿಕ ಸಮೀಕ್ಷೆ ಸಾಧ್ಯವಿಲ್ಲ. ಅಷ್ಟಕ್ಕೂ ರಾಜ್ಯದಲ್ಲಿ ಪರಿಸ್ಥಿತಿ ಅಷ್ಟೊಂದು ಗಂಭೀರ ಸ್ಥಿತಿಗೆ ತಲುಪಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಅಗತ್ಯ ಬಿದ್ದರೆ ವೈಮಾನಿಕ ಸಮೀಕ್ಷೆ ನಡೆಸಲು ಸಿದ್ಧ ಎಂದು ಹೇಳಿದರು.
ಸಚಿವರಾದ ಆರ್.ವಿ.ದೇಶಪಾಂಡೆ, ಕೃಷ್ಣಬೈರೇಗೌಡ, ಯು.ಟಿ.ಖಾದರ್, ಸಾ.ರ.ಮಹೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.