ಬೆಂಗಳೂರು: “ಮಾಸ್ತಿಗುಡಿ’ ಚಿತ್ರದ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಮುಳುಗಿ ಇಬ್ಬರು ನಟರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಚಿತ್ರನಿರ್ದೇಶಕ ನಾಗಶೇಖರ್ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಐಪಿಸಿ ಕಲಂ 304(ಎ) ಅಡಿಯಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಅಧೀನ ನ್ಯಾಯಾಲಯಕ್ಕೆ ಆದೇಶಿಸಿದೆ.
ಈ ಕುರಿತು ಶುಕ್ರವಾರ ತೀರ್ಪು ಪ್ರಕಟಿಸಿ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಏಕಸದಸ್ಯ ಪೀಠ, ಆರೋಪಿಗಳ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿತು. ಆದರೆ, ಆರೋಪಿಗಳ ವಿರುದ್ಧದ ಐಪಿಸಿ ಕಲಂ 304 ಅಡಿಯ ಪ್ರಕರಣದ ಬದಲಿಗೆ, ನಿರ್ಲಕ್ಷ್ಯದಿಂದ ಸಾವಿಗೆ ಕಾರಣ 304(ಎ)ಅಡಿಯಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ರಾಮನಗರ ಜೆಎಂಎಫ್ಸಿ ನ್ಯಾಯಾಲಯಕ್ಕೆ ಆದೇಶಿಸಿದೆ.
2016ರ ನವೆಂಬರ್ 7ರಂದು ತಿಪ್ಪಗೊಂಡನಳ್ಳಿ ಜಲಾಶಯದಲ್ಲಿ ನಡೆಯುತ್ತಿದ್ದ ಮಾಸ್ತಿಗುಡಿ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ, ಹೆಲಿಕಾಪ್ಟರ್‌ನಿಂದ ಹಾರಿದ್ದ ಖಳನಟರಾದ ಉದಯ್ ಹಾಗೂ ಅನಿಲ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಚಿತ್ರೀಕರಣದ ವೇಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಕಾರಣದಿಂದಲೇ ನಟರಿಬ್ಬರ ಸಾವಿಗೆ ಕಾರಣ ಎಂದು ತಿಳಿದು ಬಂದಿತ್ತು.
ಈ ನಿಟ್ಟಿನಲ್ಲಿ ಚಿತ್ರದ ನಿರ್ಮಾಪಕ ಸುಂದರ್ ಪಿ.ಗೌಡ, ನಿರ್ದೇಶಕ ನಾಗಶೇಖರ್ ಹಾಗೂ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ತಾವರೆಕೆರೆ ಠಾಣೆ ಪೊಲೀಸರು, ಪೂರ್ವನಿರ್ಧಾರಿತ ಕೊಲೆ ಕಲಂ 304 ಅಡಿಯಲ್ಲಿ ರಾಮನಗರ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಮಾಸ್ತಿಗುಡಿ ಚಿತ್ರೀಕರಣದ ವೇಳೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ ದುರದೃಷ್ಟವಶಾತ್ ಆಕಸ್ಮಿಕವಾಗಿ ಸಂಭವಿಸಿದ ದುರ್ಘಟನೆಯಲ್ಲಿ ನಟರಿಬ್ಬರು ಜಲಾಶಯಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಇದರಲ್ಲಿ ತಮ್ಮ ಪಾತ್ರವಿಲ್ಲ. ಇದು ಪೂರ್ವನಿರ್ಧಾರಿತ ಕೊಲೆಯಲ್ಲ.
ಆದರೆ ಪೊಲೀಸರು, ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಸೆಕ್ಷನ್ 304ರ ಅಡಿಯಲ್ಲಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದು ಕಾನೂನು ಬಾಹಿರವಾಗಿದೆ. ಈ ನಿಟ್ಟಿನಲ್ಲಿ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.ಆರೋಪಿಗಳ ಪರ ವಕೀಲ ಎಚ್ ಪವನಚಂದ್ರ ಶೆಟ್ಟಿ ವಾದಿಸಿದ್ದರು.