Advertisement
ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದಕುಮಾರ್ ಅವರಿದ್ದ ಏಕಸದಸ್ಯ ಪೀಠ, ಮುಂದಿನ ವಿಚಾರಣೆವರೆಗೆ ಯಡಿಯೂರಪ್ಪ ಅವರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸದಂತೆ ಗುರುವಾರ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದೆ.
Related Articles
Advertisement
ಇದಕ್ಕೆ ಪ್ರತಿಕ್ರಿಯಿಸಿದ ಲೋಕಾಯುಕ್ತ ವಕೀಲರು, ಎರಡು ವರ್ಷಗಳಿಂದಲೂ ಪ್ರಕರಣದ ತನಿಖೆ ಪ್ರಗತಿಯಲ್ಲಿತ್ತು ಎಂದು ಹೇಳಿದರಲ್ಲದೆ, ಈ ಸಂಬಂಧ ವಾದ ಮಂಡನೆಗೆ ಕಾಲವಕಾಶ ನೀಡುವಂತೆ ನ್ಯಾಯಪೀಠಕ್ಕೆ ಕೋರಿದರು.
ಮಧ್ಯಪ್ರವೇಶಿಸಿದ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ರಾಜಕೀಯ ದುರುದ್ದೇಶದಿಂದಲೇ ಎರಡು ವರ್ಷಗಳ ಹಿಂದಿನ ಪ್ರಕರಣದ ತನಿಖೆಯನ್ನು ಈಗ ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು.
ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ಮುಂದಿನ ವಿಚಾರಣೆಯವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಲೋಕಾಯುಕ್ತ ಪೊಲೀಸರಿಗೆ ತಾಕೀತು ಮಾಡಿ ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಿತು.
ಏನಿದು ಪ್ರಕರಣ?: ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ 2010ರಲ್ಲಿ ಮಠದಹಳ್ಳಿಯ 1 ಎಕರೆ 11 ಗಂಟೆ ಭೂಮಿಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅತ್ತೆ ವಿಮಲಾ ಹಾಗೂ ಅವರ ಪುತ್ರನಿಗೆ ಕಾನೂನುಬಾಹಿರವಾಗಿ ಡಿನೋಟಿಫೈ ಮಾಡಿದ್ದು, ಈ ಸಂಬಂಧ ತನಿಖೆ ನಡೆಸುವಂತೆ ಕೋರಿ ಜಯಕುಮಾರ್ ಹಿರೇಮಠ ಎಂಬುವವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.ಅದರಂತೆ ಲೋಕಾಯುಕ್ತ ಪೊಲೀಸರು 2015 ಮೇ 5ರಂದು ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.