Advertisement

ಸರಿಯಾಗಿ ಕೆಲಸ ಮಾಡದಿದ್ರೆ ತೆಗೆದು ಹಾಕಿ

03:53 PM May 20, 2022 | Team Udayavani |

ಕೊಪ್ಪಳ: ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆಯಿದ್ದು, ಸ್ವಚ್ಛತಾ ಕಾರ್ಯಕ್ಕಾಗಿ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡಿರುವ ಗ್ರೂಪ್‌ ಡಿ ಸಿಬ್ಬಂದಿ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಅಂತವರನ್ನು ಕೆಲಸದಿಂದ ತೆಗೆದು ಹಾಕಿ ಬೇರೆ ಏಜೆನ್ಸಿಯಿಂದ ಹೊಸದಾಗಿ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಸೂಚನೆ ನೀಡಿದರು.

Advertisement

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಉತ್ತಮ ಆರೋಗ್ಯದೊಂದಿಗೆ ಆರೋಗ್ಯಯುತ ವಾತಾವರಣ ನಿರ್ಮಿಸಿಕೊಡಬೇಕು. ಜಿಲ್ಲಾಸ್ಪತ್ರೆಯಲ್ಲಿನ ಸಿಟಿ ಸ್ಕ್ಯಾನ್ ಯಂತ್ರ ಅಳವಡಿಸಿ, ಶೀಘ್ರ ಕಾರ್ಯಾರಂಭಗೊಳಿಸಬೇಕು. ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್‌ ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಸೂಚಿಸಿದ ಅವರು ಜಿಲ್ಲಾಸ್ಪತ್ರೆ ಹಾಗೂ ಕಿಮ್ಸ್‌ನ ಯಾವುದೇ ವಿಭಾಗದ ವೈದ್ಯರು ಬೇಜವಾಬ್ದಾರಿ ತೋರಿದಲ್ಲಿ, ಸಾರ್ವಜನಿಕರಿಗೆ ಲಭ್ಯವಾಗದಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ತುಂಗಭದ್ರಾ ಜಲಾಶಯದ ಹಿನ್ನೀರು ಹಾಗೂ ಕಾಲುವೆ ನೀರನ್ನು ಕಾರ್ಖಾನೆಗಳಿಗೆ ನೀಡಲು ಸರ್ಕಾರದ ನಿಯಮಗಳಿವೆ. ಅದರಂತೆ ಕಾರ್ಖಾನೆಗಳು ತಾತ್ಕಾಲಿಕ ಹಾಗೂ ಶಾಶ್ವತ ಜಾಕ್ವೆಲ್‌ ಬಳಸಿ ಕಾರ್ಖಾನೆಗೆ ಜಲಾಶಯದ ನೀರನ್ನು ಬಳಸಿಕೊಳ್ಳುತ್ತವೆ. ಆದರೆ ಕಾರ್ಖಾನೆಗಳು ನಿಗದಿ ಪಡಿಸಿದ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯದ ನೀರನ್ನು ಬಳಸಿಕೊಳ್ಳುತ್ತವೆ ಎಂಬ ದೂರುಗಳಿವೆ. ಆದ್ದರಿಂದ ತಂತ್ರಜ್ಞರನ್ನು ಕರೆಸಿ ಜಲಾಶಯದಿಂದ ನೀರನ್ನು ಪಡೆಯುವ ಪ್ರತಿ ಕಾರ್ಖಾನೆಗೂ ಮೀಟರ್‌ಗಳನ್ನು ಅಳವಡಿಸಬೇಕು. ಅದೇ ರೀತಿ ಸಂಬಂಧಿಸಿದ ಎಂಜಿನಿಯರ್‌ ಕಚೇರಿಯಲ್ಲಿ ಮೀಟರ್‌ ರೀಡಿಂಗ್‌ ದಾಖಲಾಗುವಂತೆ ವ್ಯವಸ್ಥೆ ಕಲ್ಪಿಸಬೇಕು. ಇದರಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಪಡೆಯುವುದನ್ನು ನಿಯಂತ್ರಿಸಬಹುದು ಎಂದರು.

ಅಳವಂಡಿ-ಬೆಟಗೇರಿ ಹಾಗೂ ಬಹದ್ದೂರಬಂಡಿ ನೀರಾವರಿ ಯೋಜನೆಗಳಿಗೆ ಚಾಲನೆ ನೀಡಿ ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಇವೆರಡೂ ಕಾಮಗಾರಿಗಳು ಇಂದಿನಿಂದ 40 ದಿನಗಳೊಳಗೆ ಪೂರ್ಣಗೊಳ್ಳಬೇಕು. ಇಲ್ಲದಿದ್ದಲ್ಲಿ ಕಾಮಗಾರಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅದರಂತೆ ಎಲ್‌ ಆ್ಯಂಡ್‌ ಟಿ ಸಂಸ್ಥೆಯಿಂದ ಅನುಷ್ಠಾನಗೊಳ್ಳುತ್ತಿರುವ ಜೆಜೆಎಂ ಕಾಮಗಾರಿ ಜೂನ್‌ ಅಂತ್ಯದೊಳಗೆ ಪೂರ್ಣಗೊಳ್ಳಬೇಕು. ಇಲ್ಲದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆಯ ಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next