ಬೀದರ: ಜಿಲ್ಲೆಯ ಬಿಸಿಎಂ ಇಲಾಖೆಯಲ್ಲಿ ಅವ್ಯವಹಾರ ನಡೆಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರ ಪ್ರಗತಿ ಪರಿಶೀಲನೆ ಹಾಗೂ ಸಲಹಾ ಸಮಿತಿಯ ಸದಸ್ಯ ಸಂಜು ಎ. ಯಾದವ್ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ನಿಯೋಗದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
2021-22ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ಜಿಲ್ಲಾ ಅಧಿಕಾರಿ ಹಾಗೂ ಹಾಲಿ ಅಧಿಕಾರಿ ಅವರ ಅವಧಿಯಲ್ಲಿ 5 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ದೂರಿದರು.
ವಸತಿ ನಿಲಯಗಳಿಗೆ ಬಿಡುಗಡೆಯಾದ ಅನುದಾನ ಕೇವಲ ಬಿಲ್‌ಗಳಿಗೆ ಸೀಮಿತವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯ ಕಲ್ಪಿಸಿಲ್ಲ. ಒಬ್ಬರು ಮೇಲ್ವಿಚಾರಕರಿಗೆ ಆರು ವಸತಿ ನಿಲಯಗಳ ಪ್ರಭಾರ ವಹಿಸಲಾಗಿದೆ ಎಂದು ಆರೋಪಿಸಿರುವ ಅವರು, ಮಾಹಿತಿ ಹಕ್ಕು ಕಾಯ್ದೆಯಡಿ ಹಲವು ಬಾರಿ ಇಲಾಖೆಗೆ ಸಂಬಂಧಿಸಿದ ಮಾಹಿತಿ ಕೇಳಿದರೂ, ಅಪೂರ್ಣ ಮಾಹಿತಿ ಕೊಡಲಾಗಿದೆ. ಇದರಿಂದ ಅವ್ಯವಹಾರವಾಗಿರುವುದು ಗೊತ್ತಾಗುತ್ತದೆ ಎಂದು ಹೇಳಿದರು.
ಮನವಿಗೆ ಸ್ಪಂದಿಸಿದ ಸಚಿವರು, ಅವ್ಯವಹಾರದ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಜು ಯಾದವ್ ತಿಳಿಸಿದರು. ಕರವೇ ಭಾಲ್ಕಿ ತಾಲೂಕು ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಮತ್ತಿತರರು ನಿಯೋಗದಲ್ಲಿ ಇದ್ದರು.