Advertisement

ಹಾಲಕ್ಕಿ ಒಕ್ಕಲಿಗ, ಕುಣಬಿ ಸಮುದಾಯ STಗೆ ಸೇರಿಸಲು ಕೇಂದ್ರಕ್ಕೆ ಮನವಿ

11:42 AM Jan 24, 2018 | Team Udayavani |

ಬೆಂಗಳೂರು: ಹಾಲಕ್ಕಿ ಒಕ್ಕಲಿಗ ಮತ್ತು ಕುಣಬಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಹಾಲಕ್ಕಿ ಒಕ್ಕಲಿಗ ಸಮುದಾಯ ಉತ್ತರ ಕನ್ನಡ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಕುಣಬಿ ಸಮುದಾಯ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಎರಡೂ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಈಗಾಗಲೇ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದ್ದು,
ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಸಚಿವರು, ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರು, ರಿಜಿಸ್ಟ್ರಾರ್‌ ಜನರಲ್‌ ಮತ್ತು ಜನಗಣತಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಹಾಲಕ್ಕಿ ಒಕ್ಕಲಿಗ ಸಮುದಾಯ ಪರಿಶಿಷ್ಟ ಪಂಗಡ ಸ್ಥಾನಮಾನ ಪಡೆಯಲು ಅರ್ಹವಾಗಿದೆ.

Advertisement

2013ರಲ್ಲಿ ಈ ಕುರಿತು ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತಾದರೂ ಕೇಂದ್ರ ಸರ್ಕಾರದ ರಿಜಿಸ್ಟ್ರಾರ್‌ ಜನರಲ್‌ ಕಚೇರಿ ಕೆಲ ಆಕ್ಷೇಪ ಎತ್ತಿತ್ತು. ಇದಾದ ಬಳಿಕ ಕುಲಶಾಸ್ತ್ರೀಯ ಅಧ್ಯಯನ ನಡೆಸಿ 2017ರಲ್ಲಿ ರಾಜ್ಯ ಸರ್ಕಾರ ಮತ್ತೆ ಕೇಂದ್ರಕ್ಕೆ ಶಿಫಾರಸು ಮಾಡಿರುವುದಾಗಿ ತಿಳಿಸಿದ್ದಾರೆ. ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಈಗಾಗಲೇ ಕುಲ ಶಾಸ್ತ್ರೀಯ
ಅಧ್ಯಯನ ನಡೆಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಗೋವಾದಲ್ಲಿ ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದು,
ರಾಜ್ಯದಲ್ಲೂ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ಈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. ಈ ಕುರಿತು ದೆಹಲಿಗೆ ತೆರಳಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆ ಸಿದ್ದು, ಆದ್ಯತೆ ಮೇಲೆ ಪರಿಗಣಿಸುವಂತೆ ಕೇಂದ್ರ ಸಚಿವರು ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಮುಖ್ಯಸ್ಥರನ್ನು ಕೋರಲಾಗಿದೆ. ಕೂಡಲೇ ಈ ನಿಟ್ಟಿನಲ್ಲಿ ನಿರ್ಧಾರ
ಕೈಗೊಂಡು ಹಾಲಕ್ಕಿ ಒಕ್ಕಲಿಗ ಮತ್ತು ಕುಣಬಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next