ಚಿಕ್ಕಬಳ್ಳಾಪುರ: ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ ವಿರುದ್ಧ ಅಸಮಾಧಾನಗೊಂಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಮಾಜಿ ಚಿಕ್ಕಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ ನೀಡಿದ್ದಾರೆ.
ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ 5 ಗ್ಯಾರಂಟಿಗಳ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಜಿಲ್ಲಾಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪರನ್ನು ಸರ್ಕಾರ ನೇಮಿಸಿ ಆದೇಶ ಮಾಡಿತ್ತು.
ಜಿಲ್ಲೆಯ ಜಿಲ್ಲಾಧಿಕಾರಿಗಳು ಜಿಲ್ಲಾಮಟ್ಟದ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ವಹಿಸುವಂತೆ ಎಸ್.ಎಂ.ಮುನಿಯಪ್ಪ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದರು. ಆದರೆ ಎಸ್ಎಂ ಮುನಿಯಪ್ಪ ಗ್ಯಾರಂಟಿಗಳ ಅನುಷ್ಠಾನ ಸಮಿತಿಗೆ ಅಧ್ಯಕ್ಷ ಸ್ಥಾನ ವಹಿಸಲು ಶಾಸಕರ ನಡವಳಿಕೆಗಳಿಂದ ಬೇಸೆತ್ತು ಅಧಿಕಾರ ವಹಿಸಿಕೊಂಡಿರಲಿಲ್ಲ. ಇದೀಗ ಜಿಲ್ಲಾಧಿಕಾರಿಗಳಿಗೆ ಖುದ್ದು ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರಕ್ಕೆ ರಾಜೀನಾಮೆ ನೀಡುವ ಮೂಲಕ ತೀವ್ರ ಕುತೂಹ ಮೂಡಿಸಿದ್ದಾರೆ.
ನನ್ನ ಅನಾರೋಗ್ಯದ ದೃಷ್ಠಿಯಿಂದ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿ ರಾಜೀನಾಮೆ ಪತ್ರದಲ್ಲಿ ಮುನಿಯಪ್ಪ ಉಲ್ಲೇಖಿಸಿದ್ದಾರೆ. ಆದರೆ ಅವರ ಆಪ್ತ ಮೂಲಗಳು ಹೇಳುವ ಪ್ರಕಾರ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ ಈಶ್ವರ್ ಅವರು ಚುನಾವಣೆಯಲ್ಲಿ ಗೆದ್ದ ಬಳಿಕ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ಮುಖಂಡರನ್ನು ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಅವರು ಪೋನ್ ಮಾಡಿದರೂ ಸ್ಪೀಕರಿಸುವುದಿಲ್ಲ ಎಂದು ಅಸಮಾಧಾನಗೊಂಡು ಗ್ಯಾರೆಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸ್ಥಾನವನ್ನು ನಯವಾಗಿ ನಿರಾಕರಿಸಿದ್ದಾರೆಂದು ತಿಳಿದು ಬಂದಿದೆ. ಆ ಮೂಲಕ ಚಿಕ್ಕಬಳ್ಳಾಪುರ ಶಾಸಕರ ವಿರುದ್ಧ ಮಾಜಿ ಶಾಸಕ ಮುನಿಯಪ್ಪ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.