ಬೆಂಗಳೂರು: ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ ಶೇ.12ಕ್ಕೆ ಹೆಚ್ಚಿಸಲು ಆಗ್ರಹಿಸಿ ಬೃಹತ್ ಹೋರಾಟಕ್ಕೆ ಒಕ್ಕಲಿಗರ ಸಂಘ ಮತ್ತು ಮೀಸಲಾತಿ ಹೋರಾಟ ಸಮಿತಿ ಮುಂದಾಗಿದೆ.
ನವೆಂಬರ್ 27ರಂದು ಈ ಸಂಬಂಧ ಸಮುದಾಯದ ಸ್ವಾಮೀಜಿಗಳು, ರಾಜಕಾರಣಿಗಳು ಮತ್ತು ಮುಖಂಡರು ಸೇರಿ ಪ್ರಮುಖರ ಸಭೆ ನಡೆಯಲಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲಿಗರ ಸಂಘದ ಆವರಣದ ಕುವೆಂಪು ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಭೆಯಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ನಂಜಾವಧೂತಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಕುಮಾರ ಚಂದ್ರಶೇಖರಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಆದಿಚುಂಚನಗಿರಿ ಶ್ರೀಗಳ ಸಲಹೆ ಮತ್ತು ಸೂಚನೆ ಮೇರೆಗೆ ಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಡಿ.ವಿ.ಸದಾನಂದಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್.ಅಶೋಕ, ಸಿ.ಎನ್.ಅಶ್ವತ್ಥನಾರಾಯಣ, ಆರಗ ಜ್ಞಾನೇಂದ್ರ, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ ಅವರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಅದೇ ರೀತಿ ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕಿದೆ ಎಂದು ತಿಳಿಸಿದರು. ಒಕ್ಕಲಿಗರ ಸಂಘದ ನಿರ್ದೇಶಕರು ಹಾಗೂ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.