ಬೆಂಗಳೂರು: ಮೀಸಲಾತಿ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದಿರುವ ರಾಜ್ಯ ಕಾಂಗ್ರೆಸ್ ‘ಮೀಸಲಾತಿ ಮೂಲಭೂತ ಹಕ್ಕು ಅಲ್ಲ’ ಎಂದು ಇತ್ತಿಚಿಗೆ ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದೆ.
ಕೆಪಿಸಿಸಿಯ ಪರಿಶಿಷ್ಟ ಜಾತಿ, ಪಂಗಡಗಳ ವಿಭಾಗ, ಹಿಂದುಳಿದ ವರ್ಗಗಳ ವಿಭಾಗದಿಂದ ಸೋಮವಾರ ಪುರಭವನದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸುಪ್ರಿಂ ಕೋರ್ಟ್‌ನ ಈ ತೀರ್ಪು ಆಘಾತ ತಂದಿದೆ. ಸಂವಿಧಾನ ವಿರೋಧಿಯಾದ ಈ ತೀರ್ಪು ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅವಕಾಶ ವಂಚಿತರ ಹಕ್ಕನ್ನು ಕಸಿದುಕೊಂಡಿದೆ. ತಕ್ಷಣ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮೀಸಲಾತಿ ಮೂಲಭೂತ ಹಕ್ಕಲ್ಲ ಎಂಬ ಸುಪ್ರೀಂ ಕೋರ್ಟ್‌ನ ತೀರ್ಪು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಈ ತೀರ್ಪು ಹೊರ ಬಿದ್ದು ಹತ್ತು ದಿನ ಕಳೆದರೂ ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹಸಚಿವ ಅಮಿತ್ ಶಾ ಇದರ ಬಗ್ಗೆ ಮಾತನಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನದ ಪರಿಚ್ಛೇದ 16 (4) ಹಾಗೂ 16 (4) ಎ ಅನ್ವಯ ಮೀಸಲಾತಿ ನೀಡಲು ರಾಜ್ಯಗಳಿಗೆ ಅವಕಾಶವಿದೆ. ಪ್ರಾತಿನಿಧ್ಯ ಇಲ್ಲದ ಸಮುದಾಯಗಳಿಗೆ ಮೀಸಲಾತಿ ಕೊಡಬೇಕು ಎಂದು ಹೇಳುತ್ತದೆ. ಆದ್ದರಿಂದ ಸುಪ್ರೀಂ ಕೋರ್ಟ್‌ನ ತೀರ್ಪು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು.
ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು. ಇದು ಕೇವಲ ಸಾಂಕೇತಿಕ ಪ್ರತಿಭಟನೆ. ಮುಂದೆ ಬಿಜೆಪಿ ಹಠಾವೋ ದೇಶ್ ಬಚಾವೋ ಎಂದು ಹೋರಾಟ ಮಾಡಲಾಗುವುದು ಎಂದು ಸಿದ್ದರಾಮಯ್ಯ ಇದೇ ವೇಳೆ ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಮುಖಂಡರು ಭಾಗವಹಿಸಿದ್ದರು.
ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್‌ನ ತೀರ್ಪು ಬಂದ ನಂತರವೂ ಪ್ರತಿಕ್ರಿಯೆ ನೀಡದಿರುವುದು ಕೇಂದ್ರ ಸರ್ಕಾರ ಮೀಸಲಾತಿ ವಿರೋಧಿ ಎಂಬುದನ್ನು ತೋರಿಸುತ್ತದೆ. ಸುಪ್ರೀಂ ತೀರ್ಪು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಸರ್ವಪಕ್ಷಗಳ ಸಭೆ ಕರೆದು ಮೀಸಲಾತಿ ಉಳಿಸಲು ಸುಗ್ರಿವಾಜ್ಞೆ ಹೊರಡಿಸಬೇಕು. ಇಲ್ಲವೇ ಸಂವಿಧಾನಕ್ಕೆ ತಿದ್ದುಪಡಿ ತರಬೇಕು.
-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ