ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಪರ್ವ ಮುಂದುವರಿದಿರುವ ಬೆನ್ನಲ್ಲೇ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಕುಮಾರಸ್ವಾಮಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಮಹತ್ವದ ಚರ್ಚೆ ನಡೆಸಿದ್ದಾರೆ.
ಏತನ್ಮಧ್ಯೆ ಡಿಸಿಎಂ ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನ ಎಲ್ಲಾ ಸಚಿವರು ಹಾಗೂ ಜೆಡಿಎಸ್ ನ ಸಚಿವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರದ ಜೊತೆ ಸಿಎಂ ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿಯಾಗಿ ಮೈತ್ರಿ ಸರ್ಕಾರದ ಸಚಿವ ಸಂಪುಟ ಪುನಾರಚನೆ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ.
ಸೋಮವಾರ ಸದಾಶಿವನಗರದಲ್ಲಿರುವ ಡಿಸಿಎಂ ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ಉಪಹಾರ ಕೂಟದಲ್ಲಿ ಮಹತ್ವದ ಚರ್ಚೆ ನಡೆಸಿ, ಸರ್ಕಾರ ಉಳಿಸಿಕೊಳ್ಳುವ ತಂತ್ರಗಾರಿಕೆ ಹೆಣೆಯಲಾಗಿದೆ ಎಂದು ಮೂಲಗಳು ಹೇಳಿವೆ.
ಸರ್ಕಾರದ ಹಿತದೃಷ್ಟಿಯಿಂದ ಎಲ್ಲಾ ತ್ಯಾಗಕ್ಕೂ ಸಿದ್ಧ: ಡಿಕೆಶಿ
ಡಿಸಿಎಂ ಪರಮೇಶ್ವರ್ ನಿವಾದಲ್ಲಿನ ಚರ್ಚೆ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಸರ್ಕಾರದ ಹಿತದೃಷ್ಟಿಯಿಂದ ಎಲ್ಲಾ ತ್ಯಾಗಕ್ಕೂ ಸಿದ್ದರಾಗಿದ್ದೇವೆ. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸರ್ಕಾರದ ಕೈ ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಈ ಎಲ್ಲಾ ಬೆಳವಣಿಗೆ ಬಗ್ಗೆ ಸಿಎಂ ಮತ್ತು ಸಮನ್ವಯ ಸಮಿತಿ ಅಧ್ಯಕ್ಷರು ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.