Advertisement

ಜಿಲ್ಲೆಯಲ್ಲಿ ಭೂ ವಿವಾದ ಶೀಘ್ರ ಪರಿಹರಿಸಿಕೊಳ್ಳಿ

04:18 PM Sep 02, 2019 | Team Udayavani |

ರಾಮನಗರ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಭೂಮಿಗೆ ಸಂಬಂಧಿಸಿದ ಬಾಕಿ ಇರುವ ವಿವಾದಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳ ಪಹಣಿಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳ ಕುರಿತು ಮಾಹಿತಿ ನೀಡುವಂತೆ ತಹಶೀಲ್ದಾರರಿಗೆ ಸೂಚನೆ ನೀಡಿದರು. ಮುಂದಿನ ಸಭೆಯೊಳಗೆ ಬಾಕಿ ಇರುವ ಎಲ್ಲಾ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಿ, ಜಿಲ್ಲೆಯ ಪ್ರಗತಿಯ ಬಗ್ಗೆ ಕ್ರಮವಹಿಸಿ ಎಂದರು.

ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ: ‘ಸಕಾಲ’ ಯೋಜನೆಯಡಿಯಲ್ಲಿ ಸಲ್ಲಿಕೆಯಾಗಿರುವ ಭೂ ವಿವಾದ ಸಂಬಂಧಿತ ಅರ್ಜಿಗಳ ವಿಲೇವಾರಿ ಕುರಿತಂತೆ ಬಾಕಿ ಇರುವ ಅರ್ಜಿಗಳ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಿ, ಅರ್ಜಿ ಭರ್ತಿಗೆ ತಾಂತ್ರಿಕ ಸಮಸ್ಯೆ ಇದ್ದಲ್ಲಿ, ಬದಲಿ ವ್ಯವಸ್ಥೆ ಮಾಡಿಕೊಂಡು ಶೀಘ್ರ ಅರ್ಜಿಗಳನ್ನು ವಿಲೇವಾರಿ ಮಾಡಿ ಎಂದು ಹೇಳಿದರು.

ಬೆಳ ಸಮೀಕ್ಷೆ: 2019ನೇ ಸಾಲಿನ ಮುಂಗಾರು ಹಂಗಾಮು ಬೆಳೆ ಸಮೀಕ್ಷೆ ಕಾರ್ಯ ಈಗಾಗಲೇ ಕನಕಪುರ ತಾಲೂಕಿನ 30 ಗ್ರಾಮಗಳಲ್ಲಿ ಪ್ರಗತಿಯಲ್ಲಿದೆ. ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ಪ್ರಾರಂಭವಾಗಿದೆ ಎಂದು ಜಿಲ್ಲಾಧಿಕಾರಿಗಳ ಸಭೆಯ ಗಮನ ಸೆಳೆದರು.

ಜಿಲ್ಲೆಯ ಎಲ್ಲಾ ತಾಲೂಕಿನ ಮಾಸ್ಟರ್‌ ಟ್ರೈನರ್‌ಗಳಿಗೆ ವಿಡಿಯೋ ಸಂವಾದದ ಮೂಲಕ ಬೆಳೆ ಸಮೀಕ್ಷೆ ಕುರಿತು ತರಬೇತಿ ನೀಡಲಾಗಿದೆ. ಇವರೊಂದಿಗೆ ಖಾಸಗಿ ನಿವಾಸಿಗಳು, ಮೇಲ್ವಿಚಾರಕರು ಸೇರಿದಂತೆ ಇತರೆ ಅಧಿಕಾರಿಗಳು ನಿಯೋಜನೆಗೊಂಡಿರುವುದಾಗಿ ಹೇಳಿದರು.

Advertisement

ಸರ್ಕಾರಿ ಜಮೀನಿನಲ್ಲಿ 1990ರ ಹಿಂದೆ ಅನಧಿಕೃತವಾಗಿ ಸಾಗುವಳಿ ನಡೆಸುತ್ತಿದೆ. ಅನಧಿಕೃತ ಸಾಗುವಳಿಗೆ ಸಂಬಂಧಿಸಿದಂತೆ ಸಕ್ರಮಗೊಳಿಸಿದ ಅರ್ಜಿಗಳಲ್ಲಿ ಸಾಗುವಳಿ ಚೀಟಿ ನೀಡಲು ಬಾಕಿ ಇರುವ ಪ್ರಕರಣಗಳ ಕುರಿತು ಸ್ಪಷ್ಟನೆ ನೀಡುವಂತೆ ಮತ್ತು ಶೀಘ್ರ ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.

25 ಗ್ರಾಮದಲ್ಲಿ ಸ್ಮಶಾನಕ್ಕೆ ಭೂಮಿ ಖರೀದಿ: ಜಿಲ್ಲೆಯ 823 ಗ್ರಾಮಗಳ ಪೈಕಿ 683 ಗ್ರಾಮಗಳಲ್ಲಿ ಸಾರ್ವಜನಿಕ ಸ್ಮಶಾನವಿದೆ ಎಂದು ಕಂದಾಯ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಇನ್ನುಳಿದ ಗ್ರಾಮಗಳಲ್ಲಿ ಸ್ಮಶಾನಕ್ಕೆ ಸರ್ಕಾರಿ ಜಾಗವನ್ನು ಗುರುತಿಸಲಾಗಿದೆ. 25 ಗ್ರಾಮಗಳಲ್ಲಿ ಖಾಸಗಿ ಜಮೀನನ್ನು ಖರೀದಿಸಬೇಕಾಗಿದೆ ಎಂದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಭೂ ಖರೀದಿಗೆ ಅಗತ್ಯ ಕ್ರಮವಹಿಸುವಂತೆ ಸಲಹೆ ನೀಡಿದರು.

ಪಿಂಚಣಿದಾರರ ವರದಿಗೆ ಸೂಚನೆ: ಪಿಂಚಣಿದಾರರ ಖಾತೆಗೆ ಆಧಾರ್‌ ಲಿಂಕ್‌ಗೆ ಸಂಬಂಧಿಸಿದಂತಹ ಸಮಸ್ಯೆಗಳನ್ನು ಬಗೆಹರಿಸಿ, ವಿಕಲಚೇತನರಿಗೆ, ವಿಧವೆಯರಿಗೆ, ವೃದ್ಧರಿಗೆ ನೀಡಲಾಗುತ್ತಿರುವ ಪಿಂಚಣಿ ತಲುಪುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ವರದಿ ಕೊಡುವಂತೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಿ: ತಮ್ಮ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳು, ವಿವಿಧ ಇಲಾಖೆಗಳು ನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ಪರಿಶೀಲನೆ ನಡೆಸಿ, ವರದಿ ಸಲ್ಲಿಸಬೇಕು. ಹಾಸ್ಟೆಲ್ಗಳಲ್ಲಿ ಸಮಸ್ಯೆಗಳೇನಾದರೂ ಕಂಡುಬಂದಲ್ಲಿ ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರಕ್ಕೆ ಪ್ರಯತ್ನಿಸಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಕೃಷ್ಣಮೂರ್ತಿ, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್‌ ಸೇರಿದಂತೆ ಕಂದಾಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next