ನವದೆಹಲಿ:ಜಮ್ಮು-ಕಾಶ್ಮೀರದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಕೇಂದ್ರ ಸರಕಾರ ಶುಕ್ರವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.
ಕಳೆದ 10ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ನಿರ್ಬಂಧ ವಿಧಿಸುವ ಮೂಲಕ ಮುಕ್ತವಾಗಿ ಓಡಾಡಿ ಸುದ್ದಿ ಸಂಗ್ರಹಿಸುವುದು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ನಿರ್ಬಂಧಗಳನ್ನು ಕೂಡಲೇ ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಈ ಉತ್ತರ ನೀಡಿದೆ.
ಕಣಿವೆ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಪ್ರತಿದಿನ ಪುನರ್ ವಿಮರ್ಶೆ ಮಾಡಲಾಗುತ್ತಿದ್ದು, ಸುಪ್ರೀಂಕೋರ್ಟ್ ಭದ್ರತಾ ಏಜೆನ್ಸಿಯನ್ನು ನಂಬಬೇಕು ಎಂದು ಕೇಂದ್ರ ಸುಪ್ರೀಂಗೆ ನೀಡಿದ ಉತ್ತರದಲ್ಲಿ ಮನವಿ ಮಾಡಿಕೊಂಡಿರುವುದಾಗಿ ವರದಿ ಹೇಳಿದೆ.
ಜಮ್ಮು-ಕಾಶ್ಮೀರದಲ್ಲಿ ಮಾಧ್ಯಮಗಳಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕಾಶ್ಮೀರ ಟೈಮ್ಸ್ ಕಾರ್ಯನಿರ್ವಾಹಕ ಸಂಪಾದಕಿ ಅನುರಾಧಾ ಭಾಸಿನ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಸಂಜೆಯೊಳಗೆ ದೂರವಾಣಿ ಮತ್ತು ಮೊಬೈಲ್ ಸಂಪರ್ಕದ ಮೇಲೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸುವ ಸಾಧ್ಯತೆ ಇದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿರುವುದನ್ನು ಗಮನಿಸಿದ್ದೇನೆ ಎಂದು ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ತಿಳಿಸಿದರು.
ಈ ವೇಳೆ ಸರಕಾರದ ಪರ ವಕೀಲರಾದ ಕೆಕೆ ವೇಣುಗೋಪಾಲ್, ಜಮ್ಮುವಿನಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿರುವುದಾಗಿ ಮಾಧ್ಯಮಗಳು ವರದಿ ಪ್ರಕಟಿಸಿದೆ. ಆದರೆ ಶ್ರೀನಗರದಲ್ಲಿ ನಿರ್ಬಂಧ ಮುಂದುವರಿದಿದೆ ಎಂದು ಮಾಹಿತಿ ನೀಡಿದರು.