ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಡಿ.ವಿ. ಶೈಲೇಂದ್ರ ಕುಮಾರ್ ರವರು ಶುಕ್ರವಾರ ನಿಧನ ಹೊಂದಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಬೆಳಗ್ಗೆ ಅನಾರೋಗ್ಯಕ್ಕೆ ತುತ್ತಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ವಿಲ್ಸನ್ ಗಾರ್ಡನ್ ಬಳಿಯ ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ಸಂಜೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.
ತಮ್ಮ ವಿರುದ್ಧ ಭೂ ಕಬಳಿಕೆಯ ಆರೋಪ ಕೇಳಿ ಬಂದ ಸಂದರ್ಭದಲ್ಲಿ, ಹೈ ಕೋರ್ಟ್ ವೆಬ್ ಸೈಟ್ ನಲ್ಲಿ ಮಾಹಿತಿ ಹಂಚಿಕೊಳ್ಳಲು ಅವಕಾಶ ಸಿಗದಿದ್ದಾಗ ಮುಖ್ಯ ನ್ಯಾಯಮೂರ್ತಿಯ ವಿರುದ್ಧವೇ ಸಿಡಿದೆದ್ದು ಪ್ರತ್ಯೇಕ ವೆಬ್ ಸೈಟ್ ನಲ್ಲಿ ಮಾಹಿತಿ ಹಂಚಿಕೊಂಡು ಸುದ್ದಿಯಾಗಿದ್ದರು.
ಸಿಎಂ ಸಂತಾಪ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಡಿ ವಿ ಶೈಲೇಂದ್ರ ಕುಮಾರ್ ರವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪಾರದರ್ಶಕತೆಗೆ ಹೆಚ್ಚು ಮಹತ್ವ ನೀಡುತ್ತಿದ್ದ ಶ್ರೀಯುತರು ತಮ್ಮ ಆಸ್ತಿ ವಿವರವನ್ನು ಬಹಿರಂಗವಾಗಿ ಘೋಷಿಸಿಕೊಂಡಿದ್ದ ಮೊದಲ ನ್ಯಾಯಾಧೀಶ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಟ್ವೀಟ್ ಮಾಡಿದ್ದಾರೆ.