Advertisement

17ಕ್ಕೆ ದೇವತ್ಕಲ್‌ನಲ್ಲಿ ಕಂದಾಯ ಸಚಿವರ ವಾಸ್ತವ್ಯ

07:15 PM Apr 09, 2021 | Team Udayavani |

ಯಾದಗಿರಿ: ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಎಂಬ ಘೋಷ ವಾಕ್ಯದಡಿ ಆಯೋಜಿಸಿರುವ “ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆ’ ಕಾರ್ಯಕ್ರಮ ನಿಮಿತ್ತ ಏ.17ರಂದು ಸುರಪುರ ತಾಲೂಕಿನ ದೇವತ್ಕಲ್‌ ಗ್ರಾಮದಲ್ಲಿ ಕಂದಾಯ ಸಚಿವ ಆರ್‌. ಅಶೋಕ್‌ ಗ್ರಾಮ ವಾಸ್ತವ್ಯ ಮಾಡಲಿದ್ದು, ಮೂಲ ಸೌಕರ್ಯ
ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ನಿರ್ದೇಶನ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು. ಅಂದು ದೇವತ್ಕಲ್‌ನಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದು, ಕೂಡಲೇ ಕುಡಿವ ನೀರಿನ ಸಮಸ್ಯೆ, ಸಮುದಾಯ ಭವನ, ಅಂಗನವಾಡಿ ಕಟ್ಟಡ ಸೇರಿ ಇತರ ಸಮಸ್ಯೆ ಆಲಿಸಬೇಕು. ವಾಸ್ತವ್ಯದಲ್ಲಿ ವಿವಿಧ ಇಲಾಖೆಗಳು ತಮ್ಮ ಯೋಜನೆಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಳಿಗೆ ಆರಂಭಿಸಿ ಸಾರ್ವಜನಿಕರಲ್ಲಿ ಸರ್ಕಾರದ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಿಬೇಕೆಂದು ಹೇಳಿದರು.

ಗ್ರಾಮ ವಾಸ್ತವ್ಯದಲ್ಲಿ ಗ್ರಾಮದ ಪಹಣಿಗಳಲ್ಲಿರುವ ಲೋಪದೋಷ ಸರಿಪಡಿಸಲು ಕ್ರಮ ಕೈಗೊಳ್ಳುವುದು, ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು. ಗ್ರಾಮದ ಎಲ್ಲ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಮತ್ತು ಬಿಟ್ಟು ಹೋದ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು, ಆಧಾರ್‌ ಕಾರ್ಡ್‌ ಅನುಕೂಲತೆ ಬಗ್ಗೆ ಜಾಗೃತಿ ಮೂಡಿಸುವುದು, ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಅಧಿ ಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್‌ ಮಾರ್ಗಸೂಚಿನ್ವಯ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಮತ್ತು ಜನರಿಗೆ ಮಾಸ್ಕ್, ಸಾನಿಟೈಸರ್‌ ಬಳಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ರಜಪೂತ್‌, ಸಹಾಯಕ ಆಯುಕ್ತ
ಶಂಕರಗೌಡ ಸೋಮನಾಳ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next