Advertisement

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

05:11 AM Jan 09, 2025 | Team Udayavani |

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಭಾರೀ ಪ್ರಮಾಣದಲ್ಲಿ ಬೋಧಕ ಹುದ್ದೆಗಳು ಖಾಲಿ ಇರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆದ್ಯತೆಯ ಮೇಲೆ ಹುದ್ದೆ ಭರ್ತಿ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಮತ್ತು ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ.

Advertisement

ಬುಧವಾರ ತಮ್ಮ ಗೃಹ ಕಚೇರಿ “ಕೃಷ್ಣಾ’ದಲ್ಲಿ ಕರೆದಿದ್ದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರೀಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಸರಕಾರಿ ವಿ.ವಿ. ಮತ್ತು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವನೆಗಳ ಮೇಲೆ ಆದ್ಯತೆಯ ಮೇರೆಗೆ ಅನುಮೋದನೆ ನೀಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ.

ಸರಕಾರಿ ಕಾಲೇಜು, ವಿ.ವಿ.ಗಳಲ್ಲಿ ಹೆಚ್ಚಾಗಿ ಬಡತನ, ಗ್ರಾಮೀಣ, ಹಿಂದುಳಿದ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಾರೆ. ಅವರಿಗೆ ಗುಣಮಟ್ಟದ ಶಿಕ್ಷಣ ನೀಡಲು ಬೋಧಕರು ಮುಖ್ಯವಾಗಿದ್ದು, ತಡ ಮಾಡದೇ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಈ ವೇಳೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1,842 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಒಂದೇ ದಿನದಲ್ಲಿ 1,016 ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಯೊಂದಿಗೆ ಆದೇಶ ನೀಡಲಾಗಿದೆ. 1,033 ಹುದ್ದೆಗಳು ಖಾಲಿ ಇದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಇದಕ್ಕೆ ತೃಪ್ತರಾಗದ ಮುಖ್ಯಮಂತ್ರಿ, ಖಾಲಿ ಹುದ್ದೆಗಳ ಬಗೆಗಿನ ಸಂಪೂರ್ಣ ಮಾಹಿತಿ ಪಡೆದುಕೊಂಡು ಹಣಕಾಸು ಇಲಾಖೆಗೆ ವಿವರವಾದ ಪ್ರಸ್ತಾವನೆ ಸಲ್ಲಿಸಬೇಕು ಎಂದು ನಮಗೆ ಸೂಚಿಸಿದ್ದಾರೆ ಎಂದು ಸಭೆಯಲ್ಲಿ ಭಾಗಿಯಾಗಿದ್ದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. ಹಾಗೆಯೇ, ಯಾವುದೇ ಹಣಕಾಸು ಮೂಲಗಳಿಲ್ಲದ ವಿಶೇಷ ವಿಶ್ವವಿದ್ಯಾಲಯಗಳಾದ ಕರ್ನಾಟಕ ಜನಪದ ವಿ.ವಿ., ಹಂಪಿ ಕನ್ನಡ ವಿ.ವಿ.ಗಳಿಗೆ ಹಣಕಾಸು ನೆರವು ನೀಡಲು ವಿಶೇಷ ಯೋಜನೆಯನ್ನು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ರೂಪಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹಾಗೆಯೇ ಕಲಾ ವಿಷಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಕೌಶಲಾಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆಯೂ ಮುಖ್ಯಮಂತ್ರಿಗಳು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

20 ಕಾರ್ಪೊರೆಟ್‌ ಸಂಸ್ಥೆಗಳೊಂದಿಗೆ ಒಡಂಬಡಿಕೆ
ಬಜೆಟ್‌ನಲ್ಲಿ ಉನ್ನತ ಶಿಕ್ಷಣಕ್ಕೆ ನೀಡಲಾಗಿರುವ 5862 ಕೋಟಿ ರೂ.ಗಳಲ್ಲಿ ಈವರೆಗೆ 3,713.73 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಶೇ.72.87 ಪ್ರಗತಿ ಸಾಧಿಸಲಾಗಿದೆ. 30 ಕೋಟಿ ರೂ. ವೆಚ್ಚದಲ್ಲಿ 21 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು 9 ಮಹಿಳಾ ಪಾಲಿಟೆಕ್ನಿಕ್‌ಗಳನ್ನು ಉನ್ನತೀಕರಿಸುವ ಕಾರ್ಯ ನಡೆಯುತ್ತಿದೆ. ಕಾರ್ಪೊರೆಟ್‌ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಅಡಿಯಲ್ಲಿ 20 ಕಾರ್ಪೊರೆಟ್‌ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಇನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಬಜೆಟ್‌ನಲ್ಲಿ 250 ಕೋಟಿ ರೂ. ಒದಗಿಸಲಾಗಿದ್ದು, ಇದನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು. ಅಪ್ರಂಟಿಸ್‌ ಶಿಪ್‌ ಎಂಬೆಡೆಡ್‌ ಪದವಿ ಕಾರ್ಯಕ್ರಮ ಇನ್ನಷ್ಟು ಕಾಲೇಜುಗಳಿಗೆ ವಿಸ್ತರಿಸಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

ಉನ್ನತ ಶಿಕ್ಷಣ ಪ್ರವೇಶಾತಿ: 12ನೇ ಸ್ಥಾನದಲ್ಲಿ ರಾಜ್ಯ
ಉನ್ನತ ಶಿಕ್ಷಣಕ್ಕೆ ಒಟ್ಟಾರೆ ಪ್ರವೇಶಾತಿ ರಾಜ್ಯದಲ್ಲಿ ಶೇ. 36ರಷ್ಟಿದೆ. ದೇಶದ ಸರಾಸರಿ ಪ್ರವೇಶಾತಿ ಶೇ. 27.30ರಷ್ಟಿದೆ. ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ರಾಜ್ಯ ಸದ್ಯ ರಾಷ್ಟ್ರಮಟ್ಟದಲ್ಲಿ 12ನೇ ಸ್ಥಾನದಲ್ಲಿದ್ದು, ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next