ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವುದರಿಂದ ಜೆಡಿಎಸ್‌ನೊಂದಿಗೆ ಮೈತ್ರಿ ಮುಂದುವರಿಸುವ ಬಗ್ಗೆ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಹೊಗೆಯಾಡುತ್ತಿರುವುದರಿಂದ ಶಾಸಕರ ಅಭಿಪ್ರಾಯ ಪಡೆಯುವುದು ಹಾಗೂ ಸದ್ಯ ರಾಜ್ಯದಲ್ಲಿನ ಮೈತ್ರಿ ಸರ್ಕಾರದ ಅಗತ್ಯತೆ ಕುರಿತು ಚರ್ಚಿಸಲು ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿಗೆ ಕಾರಣವಾದ ಅಂಶಗಳ ಕುರಿತು ಚರ್ಚೆ ನಡೆಸಲಾಗುವುದು.
ಜತೆಗೆ, ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಸ್ಥಳೀಯವಾಗಿ ಕಾಂಗ್ರೆಸ್‌ಗೆ ಆಗುತ್ತಿರುವ ತೊಂದರೆ ಹಾಗೂ ಮೈತ್ರಿ ಮುಂದುವರಿಸುವ ಬಗ್ಗೆ ಶಾಸಕರ ಅಭಿಪ್ರಾಯಗಳೇನು ಎನ್ನುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸ್ಥಾನ ಗಳಿಸಿರುವ ಬಿಜೆಪಿ ನಾಯಕರು, ಮೈತ್ರಿ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಅಲ್ಲದೆ, ಮೈತ್ರಿ ಸರ್ಕಾರದ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ಅಸಮಾಧಾನವಿದ್ದು, ಅವರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತಾರೆ ಎಂಬ ಮಾತುಗಳನ್ನಾಡುತ್ತಿದ್ದಾರೆ. ಹೀಗಾಗಿ, ಶಾಸಕರೊಂದಿಗೆ ಸಮಾಲೋಚನೆ ನಡೆಸಿ, ಅವರನ್ನು ಸಮಾಧಾನ ಪಡಿಸುವ ಪ್ರಯತ್ನ ಮಾಡುವ ಸಾಧ್ಯತೆ ಇದೆ.
ಕಾಡುತ್ತಿದೆ ಆತಂಕ: ಇನ್ನು, ಹದಿನೈದಕ್ಕೂ ಹೆಚ್ಚು ಶಾಸಕರು ಮತ್ತೆ ‘ಆಪರೇಷನ್ ಕಮಲ’ಕ್ಕೆ ಒಳಗಾಗುತ್ತಾರೆ ಎಂಬ ಆತಂಕ ರಾಜ್ಯ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ. ಹೀಗಾಗಿ, ಅತೃಪ್ತ ಶಾಸಕರ ಮನವೊಲಿಸಿ ಪಕ್ಷದಲ್ಲಿಯೇ ಅವರನ್ನು ಉಳಿಸಿಕೊಳ್ಳಲು ಪ್ರಯತ್ನ ಮುಂದುವರಿಸಿದ್ದು, ಅತೃಪ್ತರಿಗೆ ಮಂತ್ರಿ ಸ್ಥಾನ ನೀಡುವ ಬಗ್ಗೆಯೂ ಸಭೆಯಲ್ಲಿ ಭರವಸೆ ನೀಡುವ ಸಾಧ್ಯತೆ ಇದೆ.
ಸಚಿವರ ಜತೆ ವೇಣುಗೋಪಾಲ್ ಸಭೆ: ಇದಕ್ಕೂ ಮೊದಲು ರಾಜ್ಯ ಕಾಂಗ್ರೆಸ್ ಉಸ್ತು ವಾರಿ ಕೆ.ಸಿ.ವೇಣುಗೋಪಾಲ್ ಅವರು ಕಾಂಗ್ರೆ ಸ್ ಸಚಿವರ ಜತೆ ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆ ಇದೆ. ಒಂದು ವೇಳೆ ಅತೃಪ್ತರಿಗೆ ಸಚಿವ ಸ್ಥಾನ ನೀಡಲು ಸಂಪುಟ ಪುನಾರಚನೆ ಪರಿಸ್ಥಿತಿ ನಿರ್ಮಾಣವಾದರೆ, ಕೆಲವರು ಸಚಿವ ಸ್ಥಾನ ತ್ಯಾಗ ಮಾಡಬೇಕೆಂಬ ಸೂಚನೆ ನೀಡುವ ಸಾಧ್ಯತೆ ಇದೆ.
ಎಚ್‌ಡಿಕೆ ಭೇಟಿ: ಬಿಜೆಪಿಯವರ ‘ಆಪರೇ ಷನ್ ಕಮಲ’ದಿಂದ ಮೈತ್ರಿ ಸರ್ಕಾರವನ್ನು ರಕ್ಷಿಸಿಕೊಳ್ಳಲು ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆಯೂ ಕೆ.ಸಿ.ವೇಣುಗೋ ಪಾಲ್ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಎರಡೂ ಪಕ್ಷಗಳು ಜಂಟಿಯಾಗಿ ಬಿಜೆಪಿಯ ಕಾರ್ಯತಂತ್ರವನ್ನು ವಿಫಲಗೊಳಿಸಲು ತೆಗೆದುಕೊಳ್ಳಬೇಕಾದ ನಿರ್ಣಯಗಳ ಬಗ್ಗೆ ಎರಡೂ ಪಕ್ಷಗಳ ನಾಯಕರು ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ರಾಜಣ್ಣ ವಿರುದ್ಧ ದಿನೇಶ್‌ಗೆ ದೂರು
ಬೆಂಗಳೂರು: ಝೀರೊ ಟ್ರಾಫಿಕ್ ನಾಯಕನಿಂದ ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಸೋಲುವಂತಾಯಿತು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿರುದ್ಧ ಹೇಳಿಕೆ ನೀಡಿರುವ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ದೂರು ನೀಡಿದ್ದಾರೆ.