ಮಡಿಕೇರಿ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಸಂಪಾಜೆ ಸಮೀಪ ಕೊಯನಾಡಿನಲ್ಲಿ ನಡೆದಿದೆ.
ನೆಲ್ಲಿಹುದಿಕೇರಿಯ ನಿವಾಸಿಗಳಾದ ಚಿದಾನಂದ ಆಚಾರ್ಯ (48) ಹಾಗೂ ಪತ್ನಿ ನಳಿನಿ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಮಂಗಳೂರಿನಲ್ಲಿ ನಡೆಯುವ ತಮ್ಮ ಸಂಬಂಧಿಕರ ಉಪನಯನ ಕಾರ್ಯಕ್ರಮಕ್ಕೆಂದು ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕೊಯನಾಡಿನ ಚಡಾವು ಎಂಬಲ್ಲಿ ಅಪಘಾತ ಸಂಭವಿಸಿದೆ.
ಚಿದಾನಂದ ಆಚಾರ್ಯ ಅವರು ಸ್ಥಳದಲ್ಲೇ ಮೃತಪಟ್ಟರೆ, ನಳಿನಿ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಕೊನೆಯುಸಿರೆಳೆದಿದ್ದಾರೆ.
ಮೃತರು 14 ವರ್ಷದ ಓರ್ವ ಪುತ್ರನನ್ನು ಅಗಲಿದ್ದಾರೆ. ಗ್ರಾಮಾಂತರ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.