ಗದಗ: ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುವುದು ಕಾನೂನು ಬಾಹಿರವಾಗಿದೆ. ಇದನ್ನು ತಡೆಗಟ್ಟುವ ಮೂಲಕ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಹೆಚ್ಚಿನ ಜನ ಸೇರುವ ಸಂದರ್ಭಗಳಲ್ಲಿ, ಜಾತ್ರೆ ಹಾಗೂ ಸಂತೆಗಳು ನಡೆಯುವ ಪ್ರದೇಶಗಳ ಮಾಹಿತಿ ಪಡೆದು ಅಗತ್ಯದ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ನಿಗದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಆಟೋಗಳಲ್ಲಿ ಸಾಗಾಗಿಸುವುದನ್ನು ತಡೆಗಟ್ಟಲು ಸಂಬಂಧಿತ ಶಾಲಾ ಮುಖ್ಯಸ್ಥರೊಂದಿಗೆ ಚರ್ಚಿಸಿ ಮಕ್ಕಳ ಪಾಲಕರಿಗೂ ಈ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ಮಾತನಾಡಿ, ಯಾವುದೇ ಕಾರಣಕ್ಕೂ ಆಟೋ ರಿಕ್ಷಾಗಳಲ್ಲಿ 6 ಕ್ಕಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಸಾಗಿಸಬಾರದು. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಶಿಕ್ಷಣ ಇಲಾಖೆ ನಗರದ ಎಲ್ಲ ಶಾಲಾ ಪ್ರಾಂಶುಪಾಲರ ಜತೆ ಈ ಕುರಿತು ಚರ್ಚಿಸಿ ನಿರ್ದೇಶನ ನೀಡಿ ರಸ್ತೆ ಸುರಕ್ಷಾ ನಿಯಮ ಪಾಲಿಸಲು ಆಟೋ ಹಾಗೂ ಶಾಲಾ ವಾಹನಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಹೇಳಿದರು.
ಆಟೋ ಮಾಲೀಕರು ನಿಗದಿಗಿಂತ ಹೆಚ್ಚಿನ ಸಂಖ್ಯೆ ಮಕ್ಕಳನ್ನು ಆಟೋಗಳಲ್ಲಿ ಸಾಗಾಣೆ ಮಾಡದಂತೆ ಜಾಗೃತಿ ಮೂಡಿಸಬೇಕು. ನಿಯಮ ಪಾಲಿಸದೇ ಇರುವ ಆಟೋಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆಟೋ, ಮ್ಯಾಕ್ಸಿ ಕ್ಯಾಬ್ ಹಾಗೂ ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಈ ಕುರಿತು ಅಗತ್ಯದ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಬೆಳಗ್ಗೆ 9:00ರಿಂದ ರಾತ್ರಿ 8:00ರ ವರೆಗೆ ನಗರದಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗಲು ಲಾರಿಗಳ ನಗರ ಪ್ರವೇಶ ನಿರ್ಭಂದಿಸಲಾಗುವುದು. ನಗರದ ಎಲ್ಲ ವೃತ್ತಗಳನ್ನು ಅಭಿವೃದ್ಧಿ ಪಡಿಸುವುದರ ಜತೆಗೆ ರಸ್ತೆ ಉಬ್ಬುಗಳಿರುವಲ್ಲಿ ಅಗತ್ಯದ ಫಲಕ ಅಳವಡಿಸಲು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚಿಸಿದರು.
ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನಗಳಲ್ಲಿ ಕೂಲಿ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯವವರ ವಿರುದ್ಧ ಕೈಗೊಳ್ಳುವ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯಾ ಕೋಟಲೂರ ಆರ್, ಪೋಲಿಸ್ ಇಲಾಖೆ, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಆಟೋ, ಮ್ಯಾಕ್ಸಿ ಕ್ಯಾಬ್ ಹಾಗೂ ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.