ಹುಬ್ಬಳ್ಳಿ: ಕೇಂದ್ರ ರಸ್ತೆ ನಿಧಿಯಿಂದ ನಿರ್ಮಿಸಲಾಗುತ್ತಿರುವ ಹೊಸೂರು- ಉಣಕಲ್ಲ ಬೈಪಾಸ್ ರಸ್ತೆಯಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣ ಸಂಪರ್ಕಿಸುವ ರಸ್ತೆ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಶನಿವಾರ ಹೊಸೂರು ವೃತ್ತದಿಂದ ನೂತನ ಕೋರ್ಟ್ ಸಂಕೀರ್ಣ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿ ಹು-ಧಾ ಮಹಾನಗರ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯನಿರ್ವಾಹಕ ಅಭಿಯಂತರು, ಲೋಕೋಪಯೋಗಿ ಇಲಾಖೆ ಅಭಿಯಂತರು, ಬಿಆರ್‌ಟಿಎಸ್ ಹಾಗೂ ಹೆಸ್ಕಾಂ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರಸ್ತೆ ನಿರ್ಮಾಣ ಕಾಮಗಾರಿ ಈಗಾಗಲೇ ತಡವಾಗಿದೆ. ರಸ್ತೆ ಅಗಲೀಕರಣ ಕುರಿತು ಪಾಲಿಕೆ ಅಧಿಕಾರಿಗಳು ಸರ್ವೇ ಪೂರ್ಣಗೊಳಿಸಿದ್ದು, ದಾಖಲೆಗಳ ಅನುಸಾರ ಪಾಲಿಕೆ ಜಾಗ ಹೆಚ್ಚಿದೆ. ಹಾಗಾಗಿ ಕಾಮಗಾರಿ ಕೈಗೊಳ್ಳಲು ಯಾವುದೇ ತೊಂದರೆ ಇಲ್ಲ ಎಂದರು.
ರಸ್ತೆ ನಿರ್ಮಾಣದಿಂದ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ಬಿಆರ್‌ಟಿಎಸ್ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಿದಂತೆ ಆಗುತ್ತದೆ. ರಸ್ತೆ ಕಿರಿದಾಗಿರುವುದರಿಂದ ಕಾಮಗಾರಿ ಕೈಗೊಳ್ಳಲು ಅಡಚಣೆ ಉಂಟಾಗಿತ್ತು. ರಸ್ತೆಯಲ್ಲಿ ಉಂಟಾಗಿರುವ ಒತ್ತುವರಿ ಮನೆಗಳು, ಮರಗಳು ಹಾಗೂ ಹೆಸ್ಕಾಂ ಕಂಬಗಳನ್ನು ಶೀಘ್ರ ಸ್ಥಳಾಂತರ ಮಾಡಲಾಗುವುದು. ಗೋಕುಲ ರಸ್ತೆ ಸಂಪರ್ಕಿಸುವ ವೃತ್ತದಿಂದ ನ್ಯಾಯಾಲಯದ ಕಡೆ 110 ಅಡಿ ವರೆಗೆ ಮನೆಗಳನ್ನು ನಿರ್ಮಿಸಲಾಗಿದೆ. ಇವರಿಗೆ ಆಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಒಟ್ಟು 66 ಮನೆಗಳನ್ನು ಸ್ಥಳಾಂತರಿಸಲಾಗುತ್ತಿದೆ. 14 ಮರಗಳನ್ನು ಕಡಿಯಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ನಿಗದಿತ ವೇಳಾಪಟ್ಟಿ ಸಿದ್ಧ್ದಪಡಿಸಿ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ವಿವರಿಸಿದರು.
ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಸ್ಮಾರ್ಟ್‌ಸಿಟಿ ಅಧಿಕಾರಿ ಶಕೀಲ್ ಅಹ್ಮದ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತ ವಿರೂಪಾಕ್ಷಪ್ಪ ಯಮಕನಮರಡಿ ಇನ್ನಿತರರಿದ್ದರು.