ಹೊಸದಿಲ್ಲಿ: ಟೀಮ್ ಇಂಡಿಯಾದ ಸೀನಿಯರ್ ಆಟಗಾರರಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಮುಂದುವರಿಯುವರೋ ಇಲ್ಲವೋ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಇವರಿಬ್ಬರನ್ನೂ ಪ್ರವಾಸಿ ಅಫ್ಘಾನಿಸ್ಥಾನ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗೆ ಆಯ್ಕೆ ಮಾಡಲಾಗಿದೆ. ರೋಹಿತ್ ನಾಯಕರಾಗಿ ಮರಳಿದ್ದಾರೆ.
ಇದರೊಂದಿಗೆ ರೋಹಿತ್ ಮತ್ತು ಕೊಹ್ಲಿ ಇಬ್ಬರೂ ಈ ವರ್ಷದ ಟಿ20 ವಿಶ್ವಕಪ್‌ನಲ್ಲಿ ಆಡುವ ಸಾಧ್ಯತೆ ದಟ್ಟವಾಗಿದೆ. ಇವರಿಬ್ಬರನ್ನು ಅಫ್ಘಾನ್ ಸರಣಿಯಲ್ಲಿ ಆಡಿಸಬೇಕೋ ಬೇಡವೋ ಎಂಬ ಕಾರಣಕ್ಕಾಗಿಯೇ ತಂಡದ ಆಯ್ಕೆ ವಿಳಂಬವಾಗಿತ್ತು ಎಂಬುದು ರಹಸ್ಯವೇನೂ ಆಗಿರಲಿಲ್ಲ.
ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ 2022ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಸಲ ಟಿ20 ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು.
ಉಳಿದಂತೆ ಗಾಯಾಳು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಸೂರ್ಯಕುಮಾರ್ ಯಾದವ್ ಕೂಡ ಗಾಯಾಳಾಗಿದ್ದಾರೆ. ಬಹಳಷ್ಟು ಮಂದಿ ಟಿ20 ಸ್ಪೆಷಲಿಸ್ಟ್ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಇವರೆಂದರೆ ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ರವೀಂದ್ರ ಜಡೇಜ ಮತ್ತು ಜಸ್‌ಪ್ರೀತ್ ಬುಮ್ರಾ. ವಿಕೆಟ್ ಕೀಪರ್‌ಗಳಾಗಿ ಸಂಜು ಸ್ಯಾಮ್ಸನ್ ಮತ್ತು ಜಿತೇಶ್ ಶರ್ಮ ಅವರನ್ನು ಆರಿಸಲಾಗಿದೆ. ಸರಣಿಯ ಮೊದಲ ಪಂದ್ಯ ಜ. 11ರಂದು ಮೊಹಾಲಿಯಲ್ಲಿ ನಡೆಯಲಿದೆ.
ಭಾರತ ತಂಡ
ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮ, ರಿಂಕು ಸಿಂಗ್, ಜಿತೇಶ್ ಶರ್ಮ, ಸಂಜು ಸ್ಯಾಮ್ಸನ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಆವೇಶ್ ಖಾನ್, ಮುಕೇಶ್ ಕುಮಾರ್.