ಅಬುಧಾಬಿ: ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಭಾರತದ ಪುರುಷರ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕವಾಗಿದ್ದಾರೆ. ಬುಧವಾರ ಬಿಸಿಸಿಐ ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿದೆ.
ಬುಧವಾರ ಅಫ್ಘಾನಿಸ್ಥಾನ ವಿರುದ್ಧದ ಪಂದ್ಯದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪ ನಾಯಕ ರೋಹಿತ್ ಶರ್ಮಾ, ಆಟಗಾರರೆಲ್ಲಾ ರಾಹುಲ್ ದ್ರಾವಿಡ್ ಅವರೊಂದಿಗೆ ಕೆಲಸ ಮಾಡಲು ಉತ್ಸುಕರಾಗಿದ್ದಾರೆ ಎಂದು ಹೇಳಿದ್ದಾರೆ.
“ರಾಹುಲ್ ದ್ರಾವಿಡ್ ಒಬ್ಬ ದಿಗ್ಗಜ, ಭವಿಷ್ಯದಲ್ಲಿ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ” ಎಂದು ರೋಹಿತ್ ಶರ್ಮಾ ಹೇಳಿದರು.
ಇದನ್ನೂ ಓದಿ:14 ವರ್ಷಗಳ ಹಿಂದಿನ ದಾಖಲೆ ಮುರಿದ ರೋಹಿತ್-ರಾಹುಲ್
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿದ್ದ ರಾಹುಲ್ ದ್ರಾವಿಡ್ ಅವರನ್ನು ಎರಡು ವರ್ಷಗಳ ಅವಧಿಗೆ ಭಾರತ ತಂಡದ ಕೋಚ್ ಆಗಿ ನೇಮಕ ಮಾಡಲಾಗಿದೆ. 2023ರ ಏಕದಿನ ವಿಶ್ವಕಪ್ ವರೆಗೆ ಕೋಚ್ ಆಗಿ ಸೇವೆ ಸಲ್ಲಿಸಲಿದ್ದಾರೆ.
ರೋಹಿತ್ ಶರ್ಮಾ ಅವರು ಅಫ್ಘಾನಿಸ್ಥಾನ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ 74 ರನ್ ಗಳಿಸಿದರು. ರಾಹುಲ್ ಜೊತೆ ಮೊದಲ ವಿಕೆಟ್ ಗೆ 140 ರನ್ ಜೊತೆಯಾಟ ನಡೆಸಿದರು. ಭಾರತ ತಂಡ 66 ರನ್ ಅಂತರದಿಂದ ಜಯ ಸಾಧಿಸಿತು.