ರಾಯಚೂರು: ನ್ಯಾಯಾಂಗ ಬಂಧನದಲ್ಲಿರುವ ರೋಶನ್ ಬೇಗ್ ನಮ್ಮ ಪಕ್ಷದಲ್ಲಿಲ್ಲ. ಅವರಿಗೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಮಸ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಐಎಂಎ ಹಗರಣದಲ್ಲಿ ಜಮೀರ್ ಅಹ್ಮದ್ ಭಾಗಿಯಾದ ಆರೋಪದಡಿ ಈಗಾಗಲೇ ಅವರನ್ನು ಕರೆಸಿ ಸಿಸಿಬಿ ವಿಚಾರಣೆ ಮಾಡಿದೆ. ಈಗಾಗಲೇ ಎರಡು ಮೂರು ಬಾರಿ ಜಮೀರ್ ವಿಚಾರಣೆಗೆ ಹಾಜರಾಗಿದ್ದು ತಮ್ಮದೇನು ಪಾತ್ರವಿಲ್ಲ ಎಂದು ಹೇಳಿದ್ದಾರೆ ಎಂದರು.
ಕಾಂಗ್ರೆಸ್ ನಲ್ಲಿ ನಾಯಕತ್ವದ ಗೊಂದಲವಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆ ಬರೀ ಸುಳ್ಳು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ ಎಂದರು.
ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಬಿಟ್ಟಿದ್ದಾರೆ. ಈ ಬಾರಿ ಉಪಚುನಾವಣೆಯಲ್ಲಿ ಜನ ಪ್ರತಾಪಗೌಡ ಪಾಟೀಲಗೆ ತಕ್ಕ ಪಾಠ ಕಲಿಸಲಿದ್ದಾರೆಂಬ ವಿಶ್ವಾಸವಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಸ್ಕಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಿದ್ದೇನೆ. ಅನುದಾನ ನೀಡಿಲ್ಲವೆಂಬ ಪ್ರತಾಪಗೌಡರ ಮಾತು ಬರಿ ಸುಳ್ಳು. ನಾನು ಮುಖ್ಯಮಂತ್ರಿಯಾಗಿದ್ದಾಗ ಪ್ರತಾಪಗೌಡ ಯಾಕೆ ಅನುದಾನ ಕೊಟ್ಟಿಲ್ಲ ಅಂತ ಕೇಳಿಲ್ಲ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಮಾಜಿ ಸಚಿವ ರೋಶನ್ ಬೇಗ್ ಮನೆ ಮೇಲೆ ಸಿಬಿಐ ದಾಳಿ
ಮಸ್ಕಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ನಿಶ್ಚಿತ. ಬಿಜೆಪಿಯಲ್ಲಿದ್ದ ಬಸನಗೌಡ ಇಂದು ಕಾಂಗ್ರೆಸ್ ಸೇರಲಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದರು.
ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಲು ಒತ್ತಾಯಿಸಿ ಮಸ್ಕಿಯಲ್ಲಿ ಕಾಂಗ್ರೆಸ್ ಬೃಹತ್ ರ್ಯಾಲಿ ನಡೆಸಿತು. ಮಾಜಿ ಸಿಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭಾಗಿಯಾಗಿದ್ದರು.
ಮಸ್ಕಿಯ ಬಸವೇಶ್ವರ ವೃತ್ತದಿಂದ ಕನಕ, ವಾಲ್ಮೀಕಿ ವೃತ್ತದ ಮೂಲಕ ಅಂಬೇಡ್ಕರ್ ವೃತ್ತದವರೆಗೂ ಬೃಹತ್ ಮೆರವಣಿಗೆ ನಡೆಸಲಾಯಿತು. ಕೂಡಲೇ ಸರ್ಕಾರ ಭತ್ತಕ್ಕೆ ಬೆಂಬಲ ಬೆಲೆ, ಪ್ರೋತ್ಸಾಹ ಧನ ನೀಡಬೇಕು ಆಗ್ರಹಿಸಿದರು.