Advertisement
ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ವರ್ಷದ ನರೇಗಾ ಯೋಜನೆಯಲ್ಲಿ ಕೂಲಿ ಕಾರ್ಮಿಕರಿಗೆ 1500 ಕೋಟಿ ರೂ. ಹಣ ರಾಜ್ಯ ಸರ್ಕಾರ ನೀಡಿದೆ. ಅದರಲ್ಲಿ ಕೇಂದ್ರ ಸರ್ಕಾರ ಕೇವಲ 450 ಕೋಟಿ ರೂ.ನೀಡಿದ್ದು, ಇನ್ನೂ 1050 ಕೋಟಿ ರೂಪಾಯಿ ಬಾಕಿ ಹಣ ನೀಡಬೇಕಿದೆ. ಶೀಘ್ರವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಈ ಕುರಿತು ಸೋಮವಾರ ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರ 17 ಸಾವಿರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಗುರಿ ಹೊಂದಿದೆ. ಈಗಾಗಲೇ 12 ಸಾವಿರ ನೀರಿನ ಘಟಕಗಳನ್ನು ಪ್ರಾರಂಭಿಸಲಾಗಿದ್ದು ಉಳಿದ ಘಟಕಗಳ ಸ್ಥಾಪನೆ ಪ್ರಗತಿಯಲ್ಲಿದೆ. ಈಗಾಗಲೇ ಸ್ಥಾಪಿಸಲಾಗಿರುವ 1100 ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ದೂರು ಕೇಳಿ ಬಂದಿದೆ. ಅಂತಹ ಪ್ರಕರಣ ಪತ್ತೆ ಹಚ್ಚಲು ಕಾರ್ಯಪಡೆ ರಚನೆ ಮಾಡಲು ತೀರ್ಮಾನಿಸಲಾಗಿದೆ. ಜುಲೈ 15 ರೊಳಗೆ ಕೆಟ್ಟು ನಿಂತಿರುವ ಎಲ್ಲ ಘಟಕಗಳನ್ನು ದುರಸ್ಥಿಗೊಳಿಸಲು ಸೂಚಿಸಲಾಗುವುದು ಎಂದು ಹೇಳಿದರು.
Related Articles
Advertisement
ಬಯಲು ಬಹಿರ್ದೆಸೆ ಮುಕ್ತಅಕ್ಟೋಬರ್ 2 ರೊಳಗೆ ಕರ್ನಾಟಕ ಬಯಲು ಬಹಿರ್ದೆಸೆ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ. ಬಹುತೇಕ ಜಿಲ್ಲೆಗಳು ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತವಾಗಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆರೇಳು ಜಿಲ್ಲೆಗಳಲ್ಲಿ ಪ್ರಗತಿ ಕುಂಠಿತವಾಗಿದೆ ಎಂದು ಹೇಳಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಕೇಂದ್ರದಿಂದ ಅನುದಾನ ದೊರೆತಿಲ್ಲ. ರಾಜ್ಯ ಸರ್ಕಾರವೇ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ ಮೂಲಕ ಸಂಪೂರ್ಣ ರಾಜ್ಯ ಸರ್ಕಾರವೇ ವೆಚ್ಚ ಮಾಡಿ ಗ್ರಾಮೀಣ ರಸ್ತೆಗಳ ನಿರ್ಮಾಣ ಮಾಡಿರುವುದರಿಂದ ಬೇರೆ ರಾಜ್ಯಗಳಿಗಿಂತಲೂ ನಮ್ಮ ರಾಜ್ಯದ ಗ್ರಾಮೀಣ ರಸ್ತೆಗಳ ಪ್ರಮಾಣ ಹೆಚ್ಚಿದೆ ಎಂದರು. ಕೇಂದ್ರ ಸರ್ಕಾರ 3 ನೇ ಹಂತದ ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಈ ಯೋಜನೆಗೆ ರಾಜ್ಯ ಸರ್ಕಾರವೂ ಅಗತ್ಯ ಕ್ರಿಯಾ ಯೋಜನೆ ರೂಪಿಸುತ್ತಿದೆ. ಕೇಂದ್ರದಿಂದ ಹಣ ಬಂದ ತಕ್ಷಣ ಯೋಜನೆಯನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು. ಈ ವರ್ಷ ಸುಮಾರು 400 ರಿಂದ 500 ಕೋಟಿ ರೂ. ಹಣ ಬರುವ ಸಾಧ್ಯತೆ ಇದೆ ಎಂದು ಹೇಳಿದರು.