Advertisement

ಬಹುಗ್ರಾಮ ಕುಡಿಯುವ ನೀರು ಪೂರೈಕೆಗೆ 169 ಕೋಟಿ ರೂ.

12:30 AM Jan 31, 2019 | Team Udayavani |

ಬೆಂಗಳೂರು: ವಿಜಯಪುರ, ಮಂಡ್ಯ ಜಿಲ್ಲೆಯ ಆಯ್ದ ಗ್ರಾಮಗಳ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ 169 ಕೋಟಿ ರೂ.ವೆಚ್ಚ ಮಾಡಲು ಬುಧವಾರ ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

Advertisement

ಸಂಪುಟ ಸಭೆ ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ಆಯ್ದ ಗ್ರಾಮಗಳಿಗೆ ನೀರು ಪೂರೈಕೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿ ಮತ್ತು ಇತರ 10 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ 19 ಕೋಟಿ ರೂ.ಅನುದಾನ ನೀಡಲು ಸಮ್ಮತಿ ನೀಡಲಾಗಿದೆ ಎಂದು ಹೇಳಿದರು.

700 ಕೋಟಿ ರೂ.ಯೋಜನೆಗೆ ಒಪ್ಪಿಗೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಾಲ್ಕು ಹೊಸ ವಸತಿ ಶಾಲೆ ನಿರ್ಮಾಣ ಸೇರಿದಂತೆ ಒಟ್ಟು 28 ವಸತಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಒಟ್ಟು 700 ಕೋಟಿ ರೂ.ವೆಚ್ಚದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ನಾಲ್ಕು ಹೊಸ ವಸತಿ ಶಾಲೆ ಜತೆಗೆ 24 ಶಾಲೆಗಳನ್ನು ಪ್ರೌಢಶಾಲೆಯಿಂದ ಪಿಯುಸಿಗೆ ಮೇಲ್ದರ್ಜೆಗೇರಿಸಲು ಪೂರಕವಾಗಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಕೊಡಲಾಗಿದೆ. ಇದರಲ್ಲಿ ಉತ್ತರ ಕರ್ನಾಟಕದ 16 ಹಾಗೂ ಇತರ ಭಾಗದ 12 ವಸತಿ ಶಾಲೆ ಸೇರಿವೆ ಎಂದು ಮಾಹಿತಿ ನೀಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗಣಿತ ಹಾಗೂ ಇಂಗ್ಲಿಷ್‌ ವಿಷಯದಲ್ಲೇ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ. ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಿದ ಗಣಿತ ಕಿಟ್ ಉಪಯುಕ್ತವಾಗಿದೆ ಎಂಬ ಮಾಹಿತಿ ಇದೆ. ಆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಣಿತ ಕಿಟ್ ವಿತರಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಸಂಪುಟದ ಇತರ ನಿರ್ಧಾರಗಳು
ದೆಹಲಿಯ ಕರ್ನಾಟಕ ಭವನ ಆವರಣದಲ್ಲಿನ ಕೆ.ಬಿ.- 1 ಕಟ್ಟಡ ಹಳೆಯದಾಗಿದ್ದು, ಅದನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ 78 ಕೋಟಿ ರೂ.ವೆಚ್ಚದ ಯೋಜನೆಗೆ ಒಪ್ಪಿಗೆ.

Advertisement

ಸರ್ವ ಶಿಕ್ಷಾ ಅಭಿಯಾನ ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನವನ್ನು ಒಟ್ಟುಗೂಡಿಸಿ ಒಂದೇಸೂರಿನಡಿ ಟ್ರಸ್ಟ್‌ ರಚಿಸುವಂತೆ ಕೇಂದ್ರ  ಸರ್ಕಾರ ಸೂಚಿಸಿತ್ತು. ಅದರಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಸಂಘ ರಚನೆಗೆ ಒಪ್ಪಿಗೆ ನೀಡಲಾಗಿದೆ.

ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಕಿಮ್ಸ್‌) ಆಡಿಟೋರಿಯಂ ನವೀಕರಣ,ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ಹಾಸ್ಟೆಲ್‌ ಕಟ್ಟಡ ನಿರ್ಮಾಣ ಹಾಗೂ ಇತರ ಮೂಲ ಸೌಕರ್ಯಕ್ಕಾಗಿ 29 ಕೋಟಿ ರೂ.ಅನುದಾನ.

Advertisement

Udayavani is now on Telegram. Click here to join our channel and stay updated with the latest news.

Next