ಬೆಂಗಳೂರು: ರಾಜಧಾನಿಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಅನುದಾನದಡಿ ಈ ವರ್ಷ ಸೇರಿದಂತೆ ಮುಂದಿನ ಎರಡು ವರ್ಷಗಳಲ್ಲಿ 8,015 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕ್ರಿಯಾ ಯೋಜನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆಯಡಿ ಪ್ರಸಕ್ತ ವರ್ಷ ಸೇರಿದಂತೆ ಮೂರು ವರ್ಷಗಳ ಅವಧಿಯಲ್ಲಿ (2020-2021ರವರೆಗೆ) ರಾಜ್ಯ ಸರ್ಕಾರವು 8,015 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಿದೆ ಎಂದು ಹೇಳಿದರು.
ನಗರದಲ್ಲಿ ಮುಖ್ಯವಾಗಿ ಮೇಲುಸೇತುವೆ ನಿರ್ಮಾಣ, ರಸ್ತೆ ಅಭಿವೃದ್ಧಿ, ರಾಜ ಕಾಲುವೆಗಳ ಮರು ನಿರ್ಮಾಣ, ಕೆರೆಗಳ ಅಭಿವೃದ್ಧಿ ಹಾಗೂ ವೈಟ್ ಟಾಪಿಂಗ್ ರಸ್ತೆ, ಪಾದಚಾರಿ ಮಾರ್ಗದ ಅಭಿವೃದ್ಧಿ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರ 8,015 ಕೋಟಿ ರೂ. ವೆಚ್ಚ ಮಾಡಲಿದೆ. ಆ ಮೂಲಕ ಬೆಂಗಳೂರಿನ ಸಮಸ್ಯೆಗಳನ್ನು ಪರಿಹರಿಸಿ ಸುಧಾರಿತ ಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂಬುದನ್ನು ಸಚಿವ ಸಂಪುಟದ ನಿರ್ಣಯದ ಮೂಲಕ ದೃಢಪಡಿಸಲಾಗಿದೆ ಎಂದು ತಿಳಿಸಿದರು.
ಹಿಂದಿನ ಸರ್ಕಾರವು ಬೆಂಗಳೂರು ಅಭಿವೃದ್ಧಿಗೆ ನೀಡಿದ್ದ ಅನುದಾನ ಹೊರತುಪಡಿಸಿ 8015 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಈ ಅನುದಾನದಲ್ಲಿ ಮೆಟ್ರೋ, ಬಿಡಿಎ, ಜಲ ಮಂಡಳಿ ಯೋಜನೆಗಳು ಸೇರಿಲ್ಲ. ಹಾಗೆಯೇ ಎಲಿವೇಟೆಡ್ ಕಾರಿಡಾರ್, ಪೆರಿಫೆರಲ್ ರಿಂಗ್ ರಸ್ತೆ, ಇತರೆ ಕಾಮಗಾರಿಯೂ ಸೇರಿಲ್ಲ. ಬಿಬಿಎಂಪಿ ಅನುದಾನವನ್ನು ಬಿಟ್ಟು ಸರ್ಕಾರದಿಂದಲೇ 8,015 ಕೋಟಿ ರೂ. ಅನುದಾನವನ್ನು ಪಾಲಿಕೆ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನ ಗೊಳಿಸಲಾಗುವುದು ಎಂದು ತಿಳಿಸಿದರು.
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪವಾಗಿತ್ತು. ಸಣ್ಣಪುಟ್ಟ ಬದಲಾವಣೆಗಳೊಂದಿಗೆ ಈ ಬಾರಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಪಟ್ಟಂತೆ ತಾತ್ಕಾಲಿಕ ಕ್ರಿಯಾ ಯೋಜನೆಗೆ ಸಂಪುಟ ಅನುಮೋದನೆ ನೀಡಿದ್ದು, ಕ್ರಿಯಾ ಯೋಜನೆಯಲ್ಲಿ ಬದಲಾವಣೆ ಮಾಡುವ ಅಧಿಕಾರ ಉಪಮುಖ್ಯಮಂತ್ರಿಗಳಿಗೆ ಇರಲಿದೆ ಎಂದು ಹೇಳಿದರು.
ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಅವರು ಬೆಂಗಳೂರಿನಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ಧಿಗೆ ಅನುದಾನ ಘೋಷಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ರೀತಿಯ ಒತ್ತಡವಿರಲಿಲ್ಲ. ಸಾಮಾನ್ಯ ಆಡಳಿತ ವ್ಯವಸ್ಥೆಯಲ್ಲಿ ತುಸು ವಿಳಂಬವಾಗಿರಬಹುದಷ್ಟೇ. ಬೆಂಗಳೂರಿನ ಮೂಲ ಸೌಕಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.