Advertisement

ರುದ್ರೇಶ್‌ ಕೊಲೆ ಪ್ರಕರಣ : ವಿಚಾರಣೆ ವರ್ಗಾವಣೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಜಾ

12:44 PM Mar 30, 2022 | Team Udayavani |

ಬೆಂಗಳೂರು : ಆರೆಸ್ಸೆಸ್‌ ಕಾರ್ಯಕರ್ತ ರುದ್ರೇಶ್‌ ಕೊಲೆ ಪ್ರಕರಣದ ವಿಚಾರಣೆಯನ್ನು ಎನ್‌ಐಎ ವಿಶೇಷ ನ್ಯಾಯಾಲಯದಿಂದ ಸಾಮಾನ್ಯ ಸೆಷನ್ಸ್‌ ಕೋರ್ಟ್‌ಗೆ ವರ್ಗಾವಣೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ.

Advertisement

ಈ ಕುರಿತು ಇರ್ಫಾನ್‌ ಪಾಷಾ ಸೇರಿದಂತೆ ಪ್ರಕರಣದ ಇತರೆ ಮೂವರು ಆರೋಪಿಗಳು ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪುನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ಪಿ. ಕೃಷ್ಣಭಟ್‌ ಅವರನ್ನು ಒಳಗೊಂಡ ಪೂರ್ಣಪೀಠ ಮಂಗಳವಾರ ಪ್ರಕಟಿಸಿತು.

ಪ್ರಕರಣವನ್ನು ಎನ್‌ಐಎ ವಿಶೇಷ ನ್ಯಾಯಾಲಯದಿಂದ ಸಾಮಾನ್ಯ ಸೆಷನ್ಸ್‌ ಕೋರ್ಟ್‌ಗೆ ವರ್ಗಾವಣೆ ಮಾಡಬೇಕು. ಹಾಗೆಯೇ, ಪ್ರಕರಣದಲ್ಲಿ ತಮ್ಮ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಮಾಡಿರುವ ಆರೋಪಗಳನ್ನು ಕೈ ಬಿಡಬೇಕು ಎಂದು ಕೋರಿ ಆರೋಪಿಗಳು ಎನ್‌ಐಎ ಕಾಯ್ದೆಯ ಸೆಕ್ಷನ್‌ 20ರ ಅಡಿಯಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯ ವಜಾಗೊಳಿಸಿದ್ದರಿಂದ ಹೈಕೋರ್ಟ್‌ಗೆ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಸೆಕ್ಷನ್‌ 20ರಡಿಯ ಅರ್ಜಿಗಳನ್ನು ತಿರಸ್ಕರಿಸಿ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಹೀಗಾಗಿ, ಈ ಮೇಲ್ಮನವಿಗಳಿಗೆ ವಿಚಾರಣಾ ಮಾನ್ಯತೆ ಇಲ್ಲ ಎಂದು ಹೇಳಿರುವ ಹೈಕೋರ್ಟ್‌ ಅರ್ಜಿಗಳನ್ನು ತಿರಸ್ಕರಿಸಿ ಆದೇಶಿಸಿದೆ.

ಇದನ್ನೂ ಓದಿ :ಬಿಬಿಎಂಪಿ ಬಜೆಟ್ ಗುಪ್ತ್ ಗುಪ್ತ್ : ನಾಳೆಯೊಳಗೆ ಮಂಡನೆಯಾಗುತ್ತಾ ಬಜೆಟ್ ?

ಅಲ್ಲದೆ, ಜಾಮೀನು ಕೋರಿದ ಅರ್ಜಿಗಳನ್ನು ತಿರಸ್ಕರಿಸಿ ಅಥವಾ ಪುರಸ್ಕರಿಸಿ ಎನ್‌ಐಎ ವಿಶೇಷ ನ್ಯಾಯಾಲಯ ಹೊರಡಿಸಿದ ಆದೇಶಗಳನ್ನು ಪ್ರಶ್ನಿಸಿ ಎನ್‌ಐಎ ಕಾಯ್ದೆಯ ಸೆಕ್ಷನ್‌ 21ರ ಅಡಿಯಲ್ಲಿ ಸಲ್ಲಿಸಿದ ಮೇಲ್ಮನವಿಗಳು ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆ ಮಾನ್ಯತೆ ಹೊಂದಿರುತ್ತವೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಆರೋಪಿಗಳ ಪರ ವಕೀಲ ಎಸ್‌.ಬಾಲಕೃಷ್ಣನ್‌ ಮತ್ತು ಎನ್‌ಐಎ ಪರ ವಕೀಲ ಪಿ.ಪ್ರಸನ್ನಕುಮಾರ್‌ ವಾದ ಮಂಡಿಸಿದ್ದರು.

Advertisement

ಪ್ರಕರಣವೇನು?
2016ರ ಅ.16ರಂದು ಬೆಳಿಗ್ಗೆ ನಗರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಕಾರ್ಯಕ್ರಮ ಮುಗಿಸಿ ಮನೆಗೆ ತೆರಳುತ್ತಿದ್ದ ರುದ್ರೇಶ್‌ ಅವರನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದರು. ಘಟನೆ ಕುರಿತು ಕಮರ್ಷಿಯಲ್‌ ಸ್ಟ್ರೀಟ್‌ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿ 2016ರ ಡಿ.7ರಂದು ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣಾ ನ್ಯಾಯಾಲಯ ರದ್ದುಪಡಿಸಿತ್ತು. ಅದನ್ನು ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ ಸಹ ಪುರಸ್ಕರಿಸಿತ್ತು. ನಂತರ ರಾಷ್ಟ್ರೀಯ ತನಿಖಾ ದಳದ ಕಾಯ್ದೆ-2008ರ ಸೆಕ್ಷನ್‌ 20ರಡಿಯಲ್ಲಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next