Advertisement
ಕಳೆದ ಮಂಗಳವಾರ ರಾತ್ರಿ ತಮ್ಮ ಲಾಂಡ್ರಿ ಅಂಗಡಿಯನ್ನು ಮುಚ್ಚುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಶರತ್ ಅವರ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅವರ ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗಳಾಗಿತ್ತು. ಚಿಂತಾಜನಕ ಸ್ಥಿತಿಯಲ್ಲಿಯೇ ಸ್ಥಳೀಯರು ಶರತ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿ.ಸಿ. ರೋಡ್‌ನಲ್ಲಿ ಜು. 4ರಂದು ರಾತ್ರಿ ನಡೆದಿರುವ ಮರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ. ಆರೋಪಿಗಳ ಶೋಧಕ್ಕಾಗಿ ಆರು ತನಿಖಾ ತಂಡಗಳನ್ನು ರಚಿಸಲಾಗಿದೆ. ಈಗಾಗಲೇ 20 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರೂ ಮಹತ್ವದ ಸುಳಿವು ಲಭಿಸಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲಾಂಡ್ರಿಗೆ ನುಗ್ಗಿ ಅದರ ಮಾಲಕರ ಪುತ್ರ ಶರತ್ ಮೇಲೆ ದಾಳಿ ನಡೆಸಿದ ಪ್ರಕರಣವನ್ನು ಎಲ್ಲ ಆಯಾಮಗಳಲ್ಲೂ ತನಿಖೆ ಮಾಡಲಾಗುತ್ತಿದೆ. ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ಮೂರು ತಂಡಗಳು, ಜಿಲ್ಲೆಯ ಇತರ ಪ್ರದೇಶಗಳಲ್ಲಿ ಮೂರು ತನಿಖಾ ತಂಡಗಳು ಕಾರ್ಯಾಚರಿಸುತ್ತಿವೆ ಎಂದರು.