ಪಿರಿಯಾಪಟ್ಟಣ: ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸುವ ಉದ್ದೇಶವನ್ನು ಹೊಂದಿದ್ದು ಯಾವುದೇ ಕಾರಣಕ್ಕೂ ಜೆಡಿಎಸ್ ಜೊತೆ ಒಳ ಒಪ್ಪಂದ ಹಾಗೂ ವೇದಿಕೆಗಳನ್ನು ಹಂಚಿಕೊಳ್ಳಬಾರದು ಎಂದು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹಗೆ ಎಚ್ಚರಿಕೆಯ ಸಂದೇಶವನ್ನು ಪಕ್ಷದ ವರಿಷ್ಠರು ನೀಡಿದ್ದಾರೆ ಎಂದು ಕುಡಿಯುವ ನೀರು ಹಾಗೂ ಒಳ ಚರಂಡಿ ಮಂಡಳಿ ನಿರ್ದೇಶಕ ಆರ್.ಟಿ.ಸತೀಶ್ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶವನ್ನು ಕಾಡುತ್ತಿರುವ ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರ ನೇತೃತ್ವದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ಗಂಗೆ ಎಂಬ ಹೆಸರಿನಲ್ಲಿ ಪ್ರಾರಂಭಿಸಿ 2024ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಿದ್ದು ಈ ಕೆಲಸಕ್ಕಾಗಿ ರೂ. 222.91 ಲಕ್ಷ ಕೋಟಿ ಅನುದಾನ ನೀಡಿ 97.91ಲಕ್ಷ ಕುಟುಂಬಗಳಿಗೆ ಈ ಯೋಜನೆ ರೂಪಿಸಲಾಗಿದ್ದು, ಈಗಾಗಲೇ 34.78 ಲಕ್ಷ ಕುಟುಂಬಗಳಿಗೆ ಗೃಹ ನಳ ಅಳವಡಿಸಿದ್ದು, 27.17 ಲಕ್ಷ ಮನೆಗಳು ಪ್ರಗತಿಯ ಹಾದಿಯಲ್ಲಿವೆ. ಇದರಲ್ಲಿ ಪಿರಿಯಾಪಟ್ಟಣ ತಾಲೂಕಿನಾದ್ಯಂತ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 302 ಕೋಟಿ ಹಣ ಮಂಜೂರು ಮಾಡಲಾಗಿದೆ. ಆದರೆ ಈ ಯೋಜನೆಯನ್ನು ಶಾಸಕ ಕೆ ಮಹದೇವ್ ನಾನೇ ಶ್ರಮವಹಿಸಿ , ಮಂತ್ರಿಗಳ ಕೈಕಾಲು ಕಟ್ಟಿ ತಂದಿದ್ದು ಎಂದು ಸುಳ್ಳು ಹೇಳಿ ಬಿಟ್ಟಿ ಪ್ರಚಾರ ಪಡೆಯುತ್ತಿದ್ದಾರೆ ಈ ವಿಚಾರವಾಗಿ ನಾವು ಬಹಿರಂಗ ಚರ್ಚೆಗೆ ಸಿದ್ದರಿದ್ದೇವೆ. ಮತ್ತೊಮ್ಮೆ ಈ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ಶಾಸಕರ ವಿರುದ್ದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ ಮಾತನಾಡಿ ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂಬುದು ಸತ್ಯಕ್ಕೆ ದೂರವಾದ ಮಾತು, ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ನಮ್ಮ ಮೊದಲ ಶತ್ರು ಈ ಬಗ್ಗೆ ಹಳೆ ಮೈಸೂರು ಪ್ರಾಂತ್ಯದಲ್ಲಿ ಕಮಲ ಹರಳಿಸುವ ಉದ್ದೇಶದಿಂದಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಮಂಡ್ಯದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡು ಯಶಸ್ವಿಗೊಳಿಸಲಾಗಿದೆ. ತಾಲ್ಲೂಕಿನಲ್ಲಿ ನಮಗೆ ಕಾಂಗ್ರೆಸ್ ಲೆಕ್ಕಕ್ಕಿಲ್ಲ, ಜೆಡಿಎಸ್ ನಮ್ಮ ಟಾರ್ಗೆಟ್ ಈ ಬಾರಿ ತಾಲೂಕಿನಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.
ಮಾಜಿ ಶಾಸಕ ಹೆಚ್.ಸಿ.ಬಸವರಾಜ್ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಉದ್ದೇಶದಿಂದ ಬಿಜೆಪಿ ಪಕ್ಷದ ವತಿಯಿಂದ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮ ಜ.21ರಿಂದ 29ರವರೆಗೆ ನಡೆಯಲಿದ್ದು ತಾಲೂಕಿನ 235 ಬೂತ್ ಗಳಲ್ಲಿಯೂ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆಗಳನ್ನು ತಲುಪಿಸುವ ಉದ್ದೇಶವನ್ನು ಹೊಂದಿದ್ದು, ಉಜ್ವಲ ಯೋಜನೆ, ಆಯುಷ್ಮಾನ್ ಭಾರತ್, ಫಸಲ್ ಬೀಮಾ, ಕಿಸಾನ್ ಸನ್ಮಾನ, ಕೋವಿಡ್ ಲಸಿಕೆ, ಉಚಿತ ಪಡಿತರ ಹೀಗೆ ಹಲವು ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲಿದ್ದೇವೆ. ಬೂತ್ ಹಂತದ ಶೇ 60ರಷ್ಟು ಮತಗಳನ್ನು ಸೆಳೆಯುವ ಗುರಿ ಹೊಂದಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಪಿ.ಜೆ.ರವಿ, ಲೋಕಪಾಲಯ್ಯ, ವಿಕ್ರಂ ರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.