ಬೆಂಗಳೂರು: ವೇತನ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಜ. 24(ಮಂಗಳವಾರ)ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಆದರೆ ಇದರಿಂದ ಸಾರಿಗೆ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗುವುದಿಲ್ಲ.
ಜಿಲ್ಲಾ ಬಸ್ ಘಟಕಗಳ (ಡಿಪೋ) ಮುಂಭಾಗ, ಹುಬ್ಬಳ್ಳಿ, ಕಲಬುರಗಿ, ಬೆಂಗಳೂರು ಸಾರಿಗೆ ನಿಗಮಗಳ ವಿಭಾಗೀಯ ಕಚೇರಿ ಮುಂಭಾಗ ಮತ್ತು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗಳು ನಡೆಯಲಿವೆ.
ಪ್ರತಿಭಟನೆಯಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯೂಕೆಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಸಹಿತ ನಾಲ್ಕೂ ನಿಗಮಗಳಲ್ಲಿ ಸಾಂಕೇತಿಕವಾಗಿ ಸೀಮಿತ ಸಂಖ್ಯೆಯಲ್ಲಿ ಸಿಬಂದಿ ಹೋರಾಟದಲ್ಲಿ ಭಾಗವಹಿಸುವ ಮೂಲಕ ತಮಗಾದ ಅನ್ಯಾಯವನ್ನು ಪ್ರತಿಭಟಿಸಲಿದ್ದಾರೆ ಎಂದು ಸ್ವತಃ ಸಾರಿಗೆ ನೌಕರರ ಸಂಘಟನೆಗಳು ಸ್ಪಷ್ಟಪಡಿಸಿವೆ.
ಪ್ರತಿಭಟನೆಯಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಕೂಡ ಸ್ಪಷ್ಟಪಡಿಸಿವೆ.