ಧಾರವಾಡ: ಜಿಲ್ಲೆಯಲ್ಲಿ ಕೋವಿಡ್ ಬಗ್ಗೆ ಪ್ರಚಾರ, ತಿಳಿವಳಿಕೆ, ಜಾಗೃತಿ ಮೂಡಿಸಿದರೂ ಕೆಲವು ಕಡೆ ಮದುವೆ ಸಮಾರಂಭದಲ್ಲಿ 50 ಜನ ಮಾತ್ರ ಇರುವ ನಿಯಮ ಮೀರಿ ಹೆಚ್ಚು ಜನ ಸೇರುತ್ತಿರುವುದು ಕಂಡು ಬರುತ್ತಿದ್ದು, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಿ, ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿ ನಿತೇಶ ಪಾಟೀಲ ಹೇಳಿದರು.
ಡಿಸಿ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಪಡೆ ಹಾಗೂ ತಹಶೀಲ್ದಾರ್‌ಗಳ ಸಭೆಯಲ್ಲಿ ಅವರು ಮಾತನಾಡಿದರು. ಮದುವೆ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಸೇರುವುದು, ಸಾಮಾಜಿಕ ಅಂತರ ಕಾಪಾಡದಿರುವುದು, ಸಾನಿಟೈಜರ್, ಮಾಸ್ಕ್ ಬಳಸದಿರುವುದು ಕಂಡುಬಂದರೆ ಸಂಘಟಕರ ಮೇಲೆ ಪಾಲಿಕೆ ವ್ಯಾಪ್ತಿಯಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಸಂಬಂಧಿಸಿದ ಅಧಿಕಾರಿಗಳು ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾತ್ರಿ ಕರ್ಫ್ಯೂ ಬಿಗಿಗೊಳಿಸಿ: ಪ್ರತಿದಿನ ರಾತ್ರಿ 8ರಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಆದರೆ ಅನಗತ್ಯವಾಗಿ ಮತ್ತು ಖಾಸಗಿ ವಾಹನಗಳಲ್ಲಿ ಜನ ಸಂಚರಿಸುತ್ತಿರುವುದು ಕಂಡು ಬರುತ್ತಿದೆ. ಕರ್ಫ್ಯೂ ಆದೇಶ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಕುರಿತು ವರದಿ ನೀಡಬೇಕು ಎಂದು ಪೊಲೀಸ್ ಇಲಾಖೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳ ಕುರಿತು ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ. ಮಾಸ್ಕ್ ಧರಿಸದ ಜನರಿಗೆ ದಂಡ ವಿ ಧಿಸಲು ಸೂಚಿಸಲಾಗಿದೆ ಎಂದರು. ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಮಾತನಾಡಿ, ಜು. 3ರ ವರೆಗೆ ಮಾಸ್ಕ್ ಧರಿಸದೆ ನಿಯಮ ಉಲ್ಲಂಘನೆ ಮಾಡಿರುವ ಒಟ್ಟು 1543 ಜನರಿಂದ ಸುಮಾರು 3,08,600 ರೂ. ದಂಡ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು
ಕೋವಿಡ್ ನಿಯಂತ್ರಣಕ್ಕಾಗಿ ರೂಪಿಸಿರುವ ಮಾರ್ಗಸೂಚಿಗಳನ್ನು ಪಾಲಿಸದೆ 50ಕ್ಕಿಂತ ಹೆಚ್ಚು ಜನ ಸೇರಿದರೆ ಸಾರ್ವಜನಿಕರು ಸಹ ಜಿಲ್ಲಾಡಳಿತದ ಸಹಾಯವಾಣಿಗೆ ಅಥವಾ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು. ಮಾಹಿತಿದಾರರ ವಿವರ ಗೌಪ್ಯವಾಗಿ ಇರಿಸಲಾಗುವುದು. –
ನಿತೇಶ ಪಾಟೀಲ, ಜಿಲ್ಲಾಧಿಕಾರಿ