Advertisement

ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ, ದಲಿತರ ಕಡೆಗಣನೆ

02:00 PM Jul 09, 2018 | Team Udayavani |

ಮಳವಳ್ಳಿ: ಮಹಿಳೆಯರು, ದಲಿತರು ಹಾಗೂ ಗ್ರಾಮೀಣಾಭಿವೃದ್ಧಿಯನ್ನು ಜೆಡಿಎಸ್‌-ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಬಜೆಟ್‌ನಲ್ಲಿ ಕಡೆಗಣಿಸಿದೆ ಎಂದು ಆರೋಪಿಸಿ ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಪಟ್ಟಣದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

Advertisement

ಪಟ್ಟಣದ ಸಾರಿಗೆ ಬಸ್‌ ನಿಲ್ದಾಣದ ಬಳಿ ಜಮಾವಣೆಗೊಂಡ ನೂರಾರು ಮಹಿಳೆಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಣಾಳಿಕೆಯಲ್ಲಿ ಘೋಷಿಸಿರುವ ಯೋಜನೆಗಳನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜಾರಿ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆ ಜಿಲ್ಲಾ ಅಧ್ಯಕ್ಷೆ ದೇವಿ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದರ ಜತೆಗೆ ಸ್ತ್ರೀಶಕ್ತಿ ಮತ್ತು ಮಹಿಳಾ ಸ್ವಸಹಾಯ ಸಂಘಗಳ ಸಾಲಗಳನ್ನು ಮನ್ನಾ ಮಾಡುವುದಾಗಿ ಹೇಳಿದ್ದರು. ಇದೀಗ ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ದೂರಿದರು.

ರಾಜ್ಯದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವುದಾಗಿ ತಿಳಿಸಿದ್ದ ಅವರು, ಬಜೆಟ್‌ನಲ್ಲಿ ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಗ್ರಾಮೀಣ ಪ್ರದೇಶದ ಬಹುಪಾಲು ರೈತರು ಕೃಷಿ ಚಟುವಟಿಕೆಗಾಗಿ ರೈತರು ಒಡವೆಗಳನ್ನು ಬ್ಯಾಂಕ್‌ಗಳಲ್ಲಿ ಅಡಮಾನವಿಟ್ಟಿದ್ದಾರೆ,

ಸ್ತ್ರೀಶಕ್ತಿ ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಸಾಲ ಪಡೆದು ಮಹಿಳೆಯರು ಕುಟುಂಬ ನಿರ್ವಹಣೆ ಮಾಡುತ್ತಿದ್ದು, ಈ ಎಲ್ಲಾ ಸಾಲಗಳನ್ನು ಮನ್ನಾ ಮಾಡಬೇಕು ಮತ್ತು ಮಹಿಳಾ ಸಂಘಗಳಿಗೆ ಶೇ.4 ರ ಬಡ್ಡಿದರದಲ್ಲಿ ಸಾಲ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸುನಿತಾ, ತಾಲೂಕು ಅಧ್ಯಕ್ಷೆ ಸುಶೀಲ, ಕಾರ್ಯದರ್ಶಿ ಮಂಜುಳಾ, ತಿಮ್ಮೇಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next