ಗದಗ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಸ್ಥಳೀಯ ಜನರ ಸಹಭಾಗಿತ್ವ ಅಗತ್ಯ. ಅಭಿವೃದ್ಧಿ ಪರ ಚಿಂತನೆಗಳಿಗೆ ತಳ ಹಂತದಿಂದಲೇ ವಿಕೇಂದ್ರೀಕೃತ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ನಗರದ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದ
ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕರಡು ಯೋಜನೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ಸುಸ್ಥಿರ ಗ್ರಾಮೀಣ ಅಭಿವೃದ್ಧಿ ಗುರಿ ಗಮನದಲ್ಲಿಟ್ಟುಕೊಂಡು ಗ್ರಾಮೀಣ ಪ್ರದೇಶಗಳ ಜನರ ಜೀವನೋಪಾಯ, ಕೌಶಾಲ್ಯಾಭಿವೃದ್ಧಿ ಹಾಗೂ ಬಡತನ ನಿರ್ಮೂಲನೆಗಾಗಿ ಕ್ರಿಯಾ ಯೋಜನೆ
ಸಿದ್ಧಪಡಿಸಬೇಕು. ಸ್ಥಳೀಯ ಪ್ರಾಕೃತಿಕ ಹಾಗೂ ಮಾನವ ಸಂಪನ್ಮೂಲ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಪ್ರತಿಯೊಂದು ಯೋಜನೆ ಅನುಷ್ಠಾನದಲ್ಲಿ ಸ್ಥಳೀಯ ಜನರನ್ನು
ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅತೀಕ್ ಮಾತನಾಡಿ, ರಾಜ್ಯದ ಕೆಲವೇ ಜಿಲ್ಲೆಯಲ್ಲಿ ವಿಕೇಂದ್ರೀಕರಣ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇದನ್ನು ಪ್ರಾರಂಭಿಸಲಾಗುವುದು. ನಗರಸಭೆ-ಪುರಸಭೆ ವ್ಯಾಪ್ತಿಯ ನಗರ ಪ್ರದೇಶಗಳಲ್ಲೂ ವಾರ್ಡ್‌ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಕೋವಿಡ್ -19 ಸೋಂಕಿನಿಂದಾಗಿ ಅಭಿವೃದ್ಧಿ ಕಾರ್ಯದಲ್ಲಿ ತಡೆಯಾಗಿದ್ದರೂ, ಕೋವಿಡ್ ನಿಯಂತ್ರಣಕ್ಕಾಗಿ ಗ್ರಾಪಂ ವ್ಯಾಪ್ತಿಯ ಕಾರ್ಯಪಡೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು. ಸಂಸದ ಶಿವಕುಮಾರ್ ಉದಾಸಿ ಮಾತನಾಡಿ, ಸ್ಥಳೀಯ ಸಮಸ್ಯೆ ಸರಿದೂಗಿಸಲು ಹೆಚ್ಚು ಆದ್ಯತೆ ನೀಡಬೇಕು. ಜನತೆ ಅವಶ್ಯಕತೆಗಳಿಗೆ ಅನುಗುಣವಾಗಿ ಯೋಜನೆ ಸಿದ್ಧಪಡಿಬೇಕು ಎಂದರು.
ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಕಾರ್ಯಾಧ್ಯಕ್ಷ ಸಿ. ನಾರಾಯಣಸ್ವಾಮಿ, ಉಪಾಧ್ಯಕ್ಷ ಡಿ.ಆರ್. ಪಾಟೀಲ್ ಮಾತನಾಡಿ, ಸಭೆಗಳಲ್ಲಿ ಚರ್ಚಿತ ವಿಷಯಗಳು ಕಾರ್ಯರೂಪಕ್ಕೆ ಬರಬೇಕು. ಅಲ್ಲದೇ, ಇಂತಹ ಸಭೆಗಳಲ್ಲಿ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಿ ಕೊಡಬೇಕು. ವಾರ್ಡ್ ಮತ್ತು ಗ್ರಾಮಸಭೆಗಳನ್ನು ಪ್ರತಿ ಆರು ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಬೇಕು ಎಂದರು.
ಈ ವೇಳೆ ಜಿಪಂ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಶಾಸಕ ರಾಮಣ್ಣ ಲಮಾಣಿ, ಜಿಪಂ ಉಪಾಧ್ಯಕ್ಷೆ ಶೋಭಾ ಮೇಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಾದ
ಪ್ರಿಯಾಂಕಾ ಮೇರಿ ಪ್ರಾನ್ಸಿಸ್, ಎಸ್‌ಐಆರ್‌ಡಿ ಅಧಿಕಾರಿ ಗಣೇಶ ಪ್ರಸಾದ್, ಸಿಇಒ ಡಾ|ಆನಂದ್ ಕೆ., ಜಿಪಂ ಉಪ ಕಾರ್ಯದರ್ಶಿ ಕಲ್ಲೇಶ್, ವಿಪ ಮಾಜಿ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಇದ್ದರು.