ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಆಗಿದೆ.
ಶುಕ್ರವಾರ ಕೆ.ಸಿ. ವೇಣುಗೋಪಾಲ್ ಸಮ್ಮುಖ ದಲ್ಲಿ ನಡೆದ ಸಭೆಯಲ್ಲಿ ಮಲ್ಲಿಕಾರ್ಜುನ್ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದ್ದು, ಶನಿವಾರ ಅಧಿಕೃತವಾಗಿ ಪ್ರಕಟ ಗೊಳ್ಳುವ ಸಾಧ್ಯತೆ ಇದೆ.
ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು. ಆದರೆ ಅವರು ವಯಸ್ಸಿನ ಕಾರಣ ನೀಡಿ ಸ್ಪರ್ಧೆಗೆ ಹಿಂದೇಟು ಹಾಕಿ ಪುತ್ರನಿಗೆ ಟಿಕೆಟ್ ನೀಡುವಂತೆ ಪಕ್ಷದ ನಾಯಕರಿಗೆ ಮನವಿ ಮಾಡಿದ್ದರು.
ಮಲ್ಲಿಕಾರ್ಜುನ್ ಕೂಡ ಚುನಾ ವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿದ್ದರಿಂದ ದಾವಣಗೆರೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜಪ್ಪ ಅವರಿಗೆ ಟಿಕೆಟ್ ಕೊಡುವಂತೆ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದರು. ಆದರೆ ಮಂಜಪ್ಪ ಕುರುಬ ಸಮುದಾಯಕ್ಕೆ ಸೇರಿದ್ದು, ಕ್ಷೇತ್ರವನ್ನು ಲಿಂಗಾಯತ ಸಮು ದಾಯಕ್ಕೆ ನೀಡ ಬೇಕೆನ್ನುವ ಕಾರಣಕ್ಕೆ ಮಾಜಿ ಸಿಎಂ ಜೆ.ಎಚ್. ಪಟೇಲ್ ಸಂಬಂಧಿ ತೇಜಸ್ವಿ ಪಟೇಲ್ ಅವರಿಗೆ ಟಿಕೆಟ್ ನೀಡುವ ಕುರಿತೂ ಚರ್ಚೆ ನಡೆಯಿತು.
ಆದರೆ, ಶಾಮನೂರು ಕುಟುಂಬದವರೇ ಸ್ಪರ್ಧೆ ಮಾಡಿದರೆ ಗೆಲುವು ಸಾಧ್ಯ ಎನ್ನುವ ಕಾರಣಕ್ಕೆ ಶುಕ್ರವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಎಸ್.ಎಸ್. ಮಲ್ಲಿಕಾರ್ಜುನ್ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿ, ಚುನಾವಣೆಗೆ ಸ್ಪರ್ಧಿಸುವಂತೆ ಮನವೊಲಿಕೆ ಮಾಡಿದರು ಎಂದು ತಿಳಿದು ಬಂದಿದೆ.