Advertisement
ನವದೆಹಲಿಯಲ್ಲಿ ಬೀಡು ಬಿಟ್ಟಿರುವ ರಾಜಸ್ಥಾನದ ಮಾಜಿ ಡಿಸಿಎಂ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವನ್ನು ಭೇಟಿ ಮಾಡಿ, “ಕೂಡಲೇ ನನ್ನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ನೇಮಕ ಮಾಡಿ. 2023ರ ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರ ಉಳಿಸಬೇಕೆಂದಿದ್ದರೆ ಈ ಕ್ರಮ ಅನಿವಾರ್ಯ. ಪಂಜಾಬ್‌ನಲ್ಲಿ ಏನಾಗಿತ್ತು ಎನ್ನುವುದನ್ನು ನೆನಪಿಸಿಕೊಳ್ಳಿ’ ಎಂದು ಖಡಕ್ ಆಗಿ ಹೇಳಿದ್ದಾರೆ. ಇದೇ ವಿಚಾರಕ್ಕೆ ಅವರು ವರಿಷ್ಠರ ಜತೆಗೆ ಹಲವು ಬಾರಿ ಮಾತುಕತೆ ನಡೆಸಿದ್ದಾರೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ ಮತ್ತು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಕಮಲ್‌ನಾಥ್ ಗುರುವಾರ ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನದಲ್ಲಿ ಶಾಸಕ ಗೋವಿಂದ ಸಿಂಗ್ ನೇಮಕವಾಗಲಿದ್ದಾರೆ. “ಒಬ್ಬರಿಗೆ ಒಂದೇ ಹುದ್ದೆ’ ಎಂಬ ಕಾಂಗ್ರೆಸ್‌ನ ನಿಲುವಿನ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಕಮಲ್ ರಾಜೀನಾಮೆ ನೀಡಿದ್ದಾರೆ. ಅದನ್ನು ಸೋನಿಯಾ ಗಾಂಧಿ ಅಂಗೀಕರಿಸಿದ್ದಾರೆ. ಆದರೆ, ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ಅಧ್ಯಕ್ಷರಾಗಿ ಅವರು ಮುಂದುವರಿಯಲಿದ್ದಾರೆ.