ಸಾಗರ: ಜೂನ್ 25ರಿಂದ ಜುಲೈ 3ರ ವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಸಣ್ಣ ಲೋಪವೂ ಆಗದಂತೆ ನೋಡಿಕೊಳ್ಳಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂಬಂಧ ಕರೆಯಲಾಗಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕಿನಲ್ಲಿ 2,899 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಲಿದ್ದಾರೆ. ಒಟ್ಟು 10 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಎಲ್ಲ ಕೇಂದ್ರಗಳಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸುವುದು ಅಗತ್ಯ ಎಂದರು.
ಸರ್ಕಾರಿ ಪ್ರೌಢಶಾಲೆಯಲ್ಲಿ ಒಟ್ಟು 586 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಇದರ ಜೊತೆಗೆ ಈವರೆಗೆ ಹೊರ ಜಿಲ್ಲೆಯ 53 ವಿದ್ಯಾರ್ಥಿಗಳು ಸಾಗರದಲ್ಲಿ ಪರೀಕ್ಷೆ ಎದುರಿಸಲಿದ್ದಾರೆ. ಅಲ್ಲದೆ, ಸಾಗರದವರಾಗಿದ್ದು, ಹೊರ ಜಿಲ್ಲೆಗಳಿಗೆ ಹೋಗಿ ಕೊರೊನಾ ಹಿನ್ನೆಲೆಯಲ್ಲಿ ಅಲ್ಲಿಯೇ ಕ್ವಾರಂಟೈನ್‌ಗೆ ಒಳಗಾದವರು ಅದೇ ಜಿಲ್ಲೆಯಲ್ಲಿಯೇ ಪರೀಕ್ಷೆ ಎದುರಿಸಲು ಸರ್ಕಾರ ಆದೇಶ ಮಾಡಿದೆ ಎಂದು ತಿಳಿಸಿದರು.
ದೂರದಿಂದ ಸಾಗರ ಸೇರಿದಂತೆ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಲ್ಲಿಯೆ ಅವರಿಗೆ ಊಟದ ವ್ಯವಸ್ಥೆ ಮಾಡುವ ಚಿಂತನೆ ನಡೆಸಲಾಗಿದೆ ಎಂದರು. ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಮೂಲಕ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹೆಚ್ಚುವರಿ ಬಸ್‌ಗಳನ್ನು ಇರಿಸಿಕೊಂಡಿರಬೇಕು. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಯಾವ ಗ್ರಾಮದಿಂದ ಬರುತ್ತಾರೆ, ಪರೀಕ್ಷಾ ಕೇಂದ್ರ ಎಲ್ಲೆಲ್ಲಿ ಇದೆ ಎನ್ನುವುದರ ಕುರಿತು ಮಾಹಿತಿಯನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹೊಂದಿದ್ದು, ಈ ಮಾರ್ಗಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಸೂಚನೆ ನೀಡಿದರು.
ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ಬಿಇಒ ಬಿಂಬ ಕೆ.ಆರ್., ತಾಪಂ ಇಒ ಪುಷ್ಪಾ ಎಂ.ಕಮ್ಮಾರ್, ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ರಾಜಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ| ಮೋಹನ್, ಪೌರಾಯುಕ್ತ ಎಚ್. ಕೆ.ನಾಗಪ್ಪ, ಯೋಗೀಶ್, ಸುರೇಶ್ ಇದ್ದರು.