Advertisement

ಎಸ್‌ಎಸ್‌ಎಲ್‌ಸಿ ಆಂಗ್ಲ ಪರೀಕ್ಷೆ ಯಶಸ್ವಿ

04:46 PM Jun 26, 2020 | Naveen |

ಸಾಗರ: ಗುರುವಾರ ನಡೆದ ಎಸ್‌ಎಸ್‌ಎಲ್‌ಸಿ ಇಂಗ್ಲಿಷ್‌ ಪರೀಕ್ಷೆ ತಾಲೂಕಿನ 10 ಕೇಂದ್ರಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದಿದೆ.

Advertisement

ನಗರ ವ್ಯಾಪ್ತಿಯಲ್ಲಿ 5 ಹಾಗೂ ಗ್ರಾಮೀಣ ಭಾಗದಲ್ಲಿ 5 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಯಾವುದೇ ಕೇಂದ್ರದಲ್ಲೂ ಗೊಂದಲವಿಲ್ಲದೆ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಾರಿ ಒಟ್ಟು 2783 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಈ ಪೈಕಿ 2678 ವಿದ್ಯಾರ್ಥಿಗಳು ಸಾಗರ ನಗರ ಮತ್ತು ಗ್ರಾಮೀಣ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ. 105 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಗೈರಾದವರ ಪೈಕಿ 55 ವಿದ್ಯಾರ್ಥಿಗಳು ಕೋವಿಡ್ ಹಿನ್ನೆಲೆಯಲ್ಲಿ ಹೊರ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದು, 50 ವಿದ್ಯಾರ್ಥಿಗಳು ಪರೀಕ್ಷೆಯಿಂದ ಹೊರಗೆ ಉಳಿದಿದ್ದಾರೆ. ಓರ್ವ ವಿಶೇಷ ಚೇತನ ವಿದ್ಯಾರ್ಥಿಗೆ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದ್ದು, ಪೂರಕ ಪರೀಕ್ಷೆ ಎದುರಿಸಲಿದ್ದಾರೆ.

ಗ್ರಾಮೀಣ ಭಾಗದಿಂದ ಪರೀಕ್ಷಾ ಕೇಂದ್ರದ ಸಮೀಪದ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ 60 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಶಾಸಕ ಎಚ್‌. ಹಾಲಪ್ಪ ಹರತಾಳು ಸರ್ಕಾರಿ ಪ.ಪೂ. ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಇಒ ಬಿಂಬಾ ಕೆ.ಆರ್‌., ವಿದ್ಯಾರ್ಥಿಗಳು ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸಿದ್ದಾರೆ. ಮೊದಲ ದಿನ ಪರೀಕ್ಷೆ ಯಾವುದೇ ವಿಘ್ನವಿಲ್ಲದೇ ನಡೆದಿದೆ. ತಾಲೂಕು ಆಡಳಿತ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಎಲ್ಲ ರೀತಿಯ ಸಹಕಾರ ನೀಡಿದೆ. ಪೊಲೀಸ್‌ ಇಲಾಖೆ ಸಹ ಪರೀಕ್ಷಾ ಕೇಂದ್ರದ ಸುತ್ತಮುತ್ತಲೂ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದ ವಿದ್ಯಾರ್ಥಿಗಳು ಇದರಂತೆ ಮುಂದಿನ ಎಲ್ಲ ಪರೀಕ್ಷೆಗಳನ್ನು ವಿಶ್ವಾಸದಿಂದ ಎದುರಿಸುವುದಾಗಿ ತಿಳಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next