ಚಾಮರಾಜನಗರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.15, 16 ರಂದು ನಗರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ಎಸ್.ವಿನಯ್ ತಿಳಿಸಿದರು.
ನಗರದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ಫೆ.15 ರಂದು ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದ್ದು ಬೆಳಗ್ಗೆ 8.30ಕ್ಕೆ ಎಸ್ಪಿ ದಿವ್ಯಾ ಸಾರಾ ಥಾಮಸ್ ರಾಷ್ಟ್ರಧ್ವಜ, ಎಡಿಸಿ ಕಾತ್ಯಾ ಯಿನಿ ದೇವಿ ಅವರು ನಾಡಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಳಗ್ಗೆ 9.30ಕ್ಕೆ ಸಮ್ಮೇಳನದ ಸರ್ವಾಧ್ಯಕ್ಷ ಮಂಜು ಕೋಡಿಉಗನೆ ಅವರನ್ನು ಕಲಾತಂಡಗಳ ಮೆರವಣಿಗೆಯಲ್ಲಿ ಜಿಲ್ಲಾಡಳಿತ ಭವನದ ಪ್ರವೇಶದ್ವಾರ ದಿಂದ ಸಭಾ ಮಂಟ ಪಕ್ಕೆ ಕರೆತರಲಾಗುವುದು. ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ ಭವನದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮ ಶೇಖರ್ ಸಮಾರಂಭ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು ಸಂಸದ ವಿ.ಶ್ರೀನಿವಾಸಪ್ರಸಾದ್ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆಂದು ತಿಳಿಸಿದರು.
ಸಮ್ಮೇಳನಾಧ್ಯಕ್ಷ ಮಂಜು ಕೋಡಿಉಗನೆ ಅವರು ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದಾರೆ. ಈ ವೇಳೆ ಕವಿಗಳ ಪುಸ್ತಕಗಳು ಲೋಕಾರ್ಪಣೆ ಗೊಳ್ಳಲಿವೆ. ನಂತರ ವಿಶೇಷ ಸಾಧಕರು ಹಾಗೂ ಕೊರೊನಾ ಯೋಧರನ್ನು ಸನ್ಮಾನಿಸಲಾಗುವುದೆಂದರು.
ಮಧ್ಯಾಹ್ನ 2 ರಿಂದ 3.30 ರವರೆಗೆ ಕನ್ನಡ ಸಾಹಿತ್ಯಕ್ಕೆ ಜಿಲ್ಲೆಯ ಕೊಡುಗೆ ವಿಚಾರ ಕುರಿತು ಮೊದಲ ಗೋಷ್ಠಿ ನಡೆಯಲಿದ್ದು ಪ್ರಾಂಶುಪಾಲರಾದ ಡಾ.ಎಚ್.ಎಸ್.ಪ್ರೇಮಲತಾ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 3.30 ರಿಂದ ಸಂಜೆ 5.30ವರೆಗೆ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ.ಡಿ. ದೊಡ್ಡ ಲಿಂಗೇ ಗೌಡರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದ್ದು, ಜಿಲ್ಲೆಯ ಹಲವು ಕವಿಗಳು ಸ್ವರಚಿತ ಕವನ ವಾಚನ ಮಾಡಲಿದ್ದಾರೆ. ಸಂಜೆ 5.30ಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸನ್ಮಾನ ನಡೆಯಲಿದೆ. ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರಾಜಪ್ಪ, ಗೌರವ ಕೋಶಾಧ್ಯಕ್ಷ ನಿರಂಜನಕುಮಾರ್, ಹೋಬಳಿ ಅಧ್ಯಕ್ಷ ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.