Advertisement

ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಮತ್ತೆ ಸಿಸಿಬಿ ಕಸ್ಟಡಿಗೆ

11:55 AM Nov 19, 2020 | keerthan |

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ಮತ್ತು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಮತ್ತೆ ಒಂದು ದಿನದ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

Advertisement

ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮುಂದೆ ಹಾಜರುಪಡಿಸಿದರು. ಈ ವೇಳೆ ಸಂಪತ್ ರನ್ನು 10 ದಿನ ಕಸ್ಟಡಿಗೆ ನೀಡುವಂತೆ ಸಿಸಿಬಿ ಪರ ವಕೀಲರು ಮನವಿ ಮಾಡಿದ್ದರು. ಆದರೆ ಕೋರ್ಟ್ ಮತ್ತೆ ಒಂದು ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರ ಅಳಿಯ ನವೀನ್‌ ಮುಸ್ಲಿಂ ಸಮುದಾಯ ಧರ್ಮಗುರುಗಳ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿದ್ದರಿಂದ ಆಕ್ರೋಶಗೊಂಡ ಕೆಲ ಕಿಡಿಗೇಡಿಗಳು, ಆ.11ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ, ಅವರ ಕಚೇರಿ, ಸೋದರ ಅಳಿಯ ನವೀನ್‌ ಮನೆ ಹಾಗೂ ಎರಡು ಪೊಲೀಸ್‌ ಠಾಣೆಗಳ ಮೇಲೆ ಒಂದು ಸಾವಿರಕ್ಕೂ ಅಧಿಕ ಮಂದಿ ಮಾರಕಾಸ್ತ್ರಗಳಿಂದ ಧ್ವಂಸ ಮಾಡಿದ್ದರು. ಅಲ್ಲದೆ, ಬೆಂಕಿ ಹಚ್ಚಿ ವಿಧ್ವಂಸಕ ಕೃತ್ಯ ಎಸಗಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸಿಸಿಬಿ ಪೊಲೀಸರು ಸುಮಾರು 300ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಚಾರ್ಜ್ ಶೀಟ್ ಹಾಕುತ್ತಿದ್ದಂತೆ ಅವರು ನಾಪತ್ತೆಯಾಗಿದ್ದರು. ಸೋಮವಾರ ಸಂಜೆ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next