ನವದೆಹಲಿ : ಸಂಯುಕ್ತ ಕಿಸಾನ್ ಮೋರ್ಚಾ ನವೆಂಬರ್ 29 ರಂದು ನಡೆಸಲು ನಿರ್ಧರಿಸಿದ ಸಂಸತ್ತಿಗೆ ಟ್ರ್ಯಾಕ್ಟರ್ ಮೆರವಣಿಗೆಯನ್ನು ರದ್ದುಗೊಳಿಸಿದೆ.
ಮುಂದಿನ ತಿಂಗಳಿನಲ್ಲಿ ಸಭೆ ನಡೆಸಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ಧರಿಸುವುದಾಗಿ ರೈತ ನಾಯಕರುಗಳು ತಿಳಿಸಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಎರಡು ದಿನಗಳ ಮುಂಚಿತವಾಗಿ ಮೆರವಣಿಗೆಯನ್ನು ರದ್ದು ಗೊಳಿಸುವ ನಿರ್ಧಾರ ಮಾಡಲಾಗಿದೆ.
ಚಳಿಗಾಲದ ಅಧಿವೇಶನದಲ್ಲಿ ಮೂರು ಕೇಂದ್ರ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಅಂಗೀಕರಿಸಲು ಮತ್ತು ಕನಿಷ್ಠ ಬೆಂಬಲ ಬೆಲೆ ಘೋಷಿಸಲು ರೈತ ನಾಯಕರು ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ನಾಯಕ ದರ್ಶನ್ ಪಾಲ್, “ನಾವು ಸೋಮವಾರ ಸಂಸತ್ತಿನ ಮೆರವಣಿಗೆಯನ್ನು ಸ್ಥಗಿತಗೊಳಿಸುತ್ತಿದ್ದೇವೆ. ರೈತರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯುವುದು, ಪ್ರತಿಭಟನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ರೈತರ ಸ್ಮಾರಕ ನಿರ್ಮಿಸಲು ಭೂಮಿ ಮಂಜೂರು ಮಾಡುವುದು, ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಅಮಾನತುಗೊಳಿಸುವಂತೆ ನಾವು ಪ್ರಧಾನಿಗೆ ಪತ್ರ ಬರೆದಿದ್ದೇವೆ ಎಂದರು.