ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆಯಾಗಿದ್ದು, ಈ ಬಗ್ಗೆ ರಾಜ್ಯ ಕೇಂದ್ರದ ಮಧ್ಯ ಪ್ರವೇಶಕ್ಕೆ ಆಗ್ರಹಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ತಲುಪಿದ್ದಾರೆ.
ನೀರಿನ ಅಭಾವವಿದ್ದರೂ ತಮಿಳುನಾಡಿಗೆ ನೀರು ಬಿಟ್ಟಿರುವ ರಾಜ್ಯಕ್ಕೆ ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದೆ. ಇದು ಕರ್ನಾಟಕಕ್ಕೆ ಮತ್ತೆ ಹಿನ್ನೆಡೆ ಉಂಟಾಗುವಂತೆ ಆಗಿದೆ.
ಕಾವೇರಿ ನೀರು ವಿವಾದದ ವಿಚಾರವಾಗಿ ನೂರಾರು ರೈತರು ಹಾಗೂ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿವೆ. ಈ ನಡುವೆ ಈ ವಿವಾದದ ಬಗ್ಗೆ ಧ್ವನಿ ಎತ್ತಿಲ್ಲ ಎನ್ನುವ ಕಾರಣಕ್ಕೆ ಕೆಲವರು ಸ್ಯಾಂಡಲ್ ವುಡ್ ನಟರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಪಡಿಸಿದ್ದಾರೆ.
ಇದೀಗ ಕಾವೇರಿ ನಮ್ಮದು ಎಂದು ನಟ ದರ್ಶನ್ ಕಾವೇರಿ ನೀರಿನ ವಿವಾದಕ್ಕೆ ರಿಯಾಕ್ಟ್ ಮಾಡಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ” ಎಂದಿದ್ದಾರೆ.
ಇನ್ನು ಕಿಚ್ಚ ಸುದೀಪ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, “ಸ್ನೇಹಿತರೆ ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ” ಎಂದು ಟ್ವೀಟ್ ಮಾಡಿದ್ದಾರೆ.
ನಟರ ಟ್ವೀಟ್ ಗೆ ಅನೇಕರು ಬೆಂಬಲ ನೀಡಿ, ಅವರ ನಡೆಯನ್ನು ಶ್ಲಾಘಿಸಿದ್ದಾರೆ.