ಬೆಳಗಾವಿ: ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆಯಿಂದಾಗಿ ವಿಕೋಪಕ್ಕೆ ತಿರುಗಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿವರೆಗೂ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ.
ಎಡಿಜಿಪಿ ಅಮರಕುಮಾರ್ ಪಾಂಡೆ ಹಾಗೂ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎರಡೂ ಗುಂಪಿನ ಕಡೆಯವರು ಒಂದು ಹಂತಕ್ಕೆ ಬಂದಿದ್ದು, ವಿವಾದ ಸುಖಾಂತ್ಯ ಕಂಡಿದೆ.
ರಾಯಣ್ಣ ಪ್ರತಿಮೆಯನ್ನು ಈಗ ಪ್ರತಿಷ್ಠಾಪಿಸಿರುವ ಸ್ಥಳದಲ್ಲಿಯೇ ಇರಿಸುವುದು ಹಾಗೂ ಆ ವೃತ್ತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ನಾಮಕರಣ ಮಾಡಬೇಕು ಎಂಬ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.
ಇದಕ್ಕೆ ಕನ್ನಡಪರ ಸಂಘಟನೆಯವರು, ಶಿವಾಜಿ ಮಹಾರಾಜರ ಭಕ್ತರು, ಗ್ರಾಮದ ಮುಖಂಡರು, ಎಂಇಎಸ್ ಹಾಗೂ ಶಿವಸೇನೆಯವರು ಸಮ್ಮತಿ ಸೂಚಿಸಿದ್ದರಿಂದ ವಿವಾದಕ್ಕೆ ತೆರೆ ಎಳೆಯಲಾಯಿತು.
ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ, ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.
ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಡಿಸಿಪಿ ಸೀಮಾ ಲಾಟ್ಕರ್, ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.