Advertisement

ಸ್ಯಾನಿಟರಿ ನ್ಯಾಪ್‌ಕಿನ್‌ಗೆ ಜಿಎಸ್‌ಟಿ ಬೇಡ

11:18 AM Jul 25, 2017 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮೇಲೆ ವಿಧಿಸಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ರದ್ದುಗೊಳಿಸಬೇಕು ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯೆ ತಾರಾ ಅನುರಾಧಾ ಒತ್ತಾಯಿಸಿದ್ದಾರೆ.

Advertisement

ಸೋಮವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಅಯೋಧ್‌ ಸೇವಾ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಬಡತನ ರೇಖೆಗಿಂತ ಕೆಳಗಿನ ಮಹಿಳೆಯರಿಗೆ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಣೆ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಋತುಮತಿ ಮಹಿಳೆಯರ ಅತ್ಯಗತ್ಯ ವಸ್ತುಗಳಲ್ಲಿ ಒಂದಾಗಿರುವ ಸ್ಯಾನಿಟರಿ ನ್ಯಾಪ್‌ಕಿನ್‌ಗಳಿಗೆ ಜಿಎಸ್‌ಟಿ ವಿಧಿಸಿರುವುದು ಸರಿಯಲ್ಲ. ಅದನ್ನು ತೆರಿಗೆ ವ್ಯಾಪ್ತಿಯಿಂದ ಹೊರಗಿಡುವಂತೆ ಜಿಎಸ್‌ಟಿ ಕೌನ್ಸಿಲ್‌ಗೆ ವೈಯಕ್ತಿಕವಾಗಿ ಪತ್ರ ಬರೆಯಲಾಗಿದೆ. ಈ ತಿಂಗಳಲ್ಲಿ ನಡೆಯುವ ಜಿಎಸ್‌ಟಿ ಕೌನ್ಸಿಲ್‌ನ ಸಭೆಯಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮೇಲೆ ತೆರಿಗೆ ವಿನಾಯಿತಿ ನಿರ್ಧಾರ ತೆಗೆದುಕೊಳ್ಳವ ವಿಶ್ವಾಸವಿದೆ ಎಂದು ತಿಳಿಸಿದರು.

ಜಿಎಸ್‌ಟಿ ಜಾರಿಗೊಳಿಸುವ ಮುನ್ನ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮೇಲೆ ವಿವಿಧ ಹಂತಗಳಲ್ಲಿ ಶೇ.18ರಷ್ಟು ತೆರಿಗೆ ವಿಧಿಸಲಾಗಿತ್ತು. ಇದು ಯಾರ ಗಮನಕ್ಕೂ ಬಂದಿರಲಿಲ್ಲ. ಈಗ ಏಕರೂಪ ತೆರಿಗೆ (ಜಿಎಸ್‌ಟಿ) ಬಂದ ಮೇಲೆ ಶೇ.12ರಷ್ಟು ತೆರಿಗೆ ವಿಧಿಸಿರುವುದು ಜನರ ಗಮನಕ್ಕೆ ಬಂದಿದೆ. ಹೀಗಾಗಿ ತೆರಿಗೆಯಿಂದ ವಿನಾಯಿತಿ ನೀಡುವಂತೆ ಕೋರಲಾಗಿದೆ ಎಂದರು.

ಸುರಕ್ಷತೆ ಅಗತ್ಯ: ದೇಶದಲ್ಲಿ ಕೇವಲ ಶೇ.12ರಷ್ಟು ಮಹಿಳೆಯರು ಮಾತ್ರ ಋತುಮತಿಯರಾದಾಗ ಸ್ಯಾನಿಟರಿ ಪ್ಯಾಡ್‌ಗಳನ್ನು ಖರೀದಿಸಿ ಬಳಸುತ್ತಿದ್ದಾರೆ. ಉಳಿದಂತೆ ಅನೇಕರು ಇಂದಿಗೂ ಸಾಂಪ್ರದಾಯಿಕ ಅವೈಜ್ಞಾನಿಕ ಪದ್ಧತಿಗಳನ್ನೇ ಅನುಸರಿಸುತ್ತಿರುವುದು ಬೇಸರದ ಸಂಗತಿ. ಆರೋಗ್ಯ ದೃಷ್ಟಿಯಿಂದ ಋತುಸ್ರಾವದ ಆ ಮೂರು ದಿನ ಸುರಕ್ಷತೆ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

Advertisement

ಉಚಿತ ವಿತರಣೆ: ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ಪ್ರವೀಣ್‌ ನಾಯಕ್‌ ಮಾತನಾಡಿ, ನಗರದ ಶಾಂತಿನಗರ ಮತ್ತು ಗಂಗಾವತಿ ತಾಲೂಕಿನ ಬಸವನದುರ್ಗ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯಡಿ 2020ರ ವೇಳೆಗೆ ಐದು ದಶಲಕ್ಷ ಮಹಿಳೆಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಿಸುವ ಗುರಿಯಿದೆ ಇದೆ.

ಇದರೊಂದಿಗೆ ಮುಟ್ಟಿನ ಸಮಯದಲ್ಲಿ ಶಾಲೆಗಳಲ್ಲಿ ಯುವತಿಯರ ಹಾಜರಾತಿ ಹೆಚ್ಚಿಸುವ ಮತ್ತು ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವುದು ಯೋಜನೆಯ ಮುಖ್ಯ ಗುರಿ. ಯೋಜನೆಗೆ ತಗುಲುವ ವೆಚ್ಚವನ್ನು ಸರಿದೂಗಿಸಲು ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಮತ್ತು ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ನಿರ್ಧರಿಸಲಾಗಿದೆ ಎಂದರು.

ಕಾರ್ಯಾಚಾರಣೆಯ ಮುಖ್ಯಸ್ಥೆ ಪೂನಂ ಮಾತನಾಡಿ,ರಾಜ್ಯಾದ್ಯಂತ ಬಿಪಿಎಲ್‌ ಕಾರ್ಡ್‌ ಹೊಂದಿರುವ ಮಹಿಳೆಯರಿಗೆ ಉಚಿತವಾಗಿ ನ್ಯಾಪ್‌ಕಿನ್‌ಗಳನ್ನು ವಿತರಿಸಲು ಆನ್‌ಲೈನ್‌ ವ್ಯವಸ್ಥೆಯನ್ನು ಶೀಘ್ರವೇ ಅಳವಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕೆಲವು ಮಹಿಳೆಯರಿಗೆ ಸಾಂಕೇತಿಕವಾಗಿ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ವಿತರಿಸಲಾಯಿತು. ಸಮಾರಂಭದಲ್ಲಿ  ಟ್ರಸ್ಟಿ ರಾಮಕೃಷ್ಣ ನಾಯಕ್‌, ರಂಗಕರ್ಮಿ ಕೃಷ್ಣಮೂರ್ತಿ ಕವತ್ತಾರ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next