ಮೈಸೂರು: ಸ್ಯಾಂಟ್ರೋ ರವಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿದ ಸಿಐಡಿ ಪೊಲೀಸರು, ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ.
ಮಂಗಳವಾರ ಬೆಳಗ್ಗೆ ಮೈಸೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರ ಎದುರು ಪೊಲೀಸರು ಆರೋಪಿಯನ್ನು ಹಾಜರು ಪಡಿಸಿದರು. ಹೆಚ್ಚಿನ ವಿಚಾರಣೆಗಾಗಿ ಸಿಐಡಿ ವಶಕ್ಕೆ ನೀಡುವಂತೆ ಸರ್ಕಾರಿ ಅಭಿಯೋಜಕರು ನ್ಯಾಯಾಧೀಶರಲ್ಲಿ ಮನವಿ ಮಾಡಿದರು.
ಸರ್ಕಾರಿ ವಕೀಲರ ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ಜ.30 ರವರೆಗೆ ಸಿಐಡಿ ವಶಕ್ಕೆ ನೀಡಲು ಆದೇಶ ನೀಡಿದ್ದಾರೆ.
ಡಿವೈಎಸ್‌ಪಿ ನರಸಿಂಹ ಮೂರ್ತಿ ನೇತೃತ್ವದಲ್ಲಿ ಸಿಐಡಿ ಅಧಿಕಾರಿಗಳ ತಂಡ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಬಳಿಕ ವಿಜಯ ನಗರ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು.
Related Articles
ದಾಖಲೆ ವರ್ಗಾವಣೆ: ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಿಐಡಿ ಅಧಿಕಾರಿಗಳಿಗೆ ವರ್ಗಾಯಿಸಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಹೇಳಿದರು. ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿದ್ದು, ಸಿಐಡಿ ಅಧಿಕಾರಿಗಳು ಮೈಸೂರಿಗೆ ಬಂದಿದ್ದಾರೆ.
ನಾವು ದಾಖಲೆಗಳನ್ನು ಹಸ್ತಾಂತರಿಸಿದ್ದೇವೆ. ಪ್ರಕರಣದ ತನಿಖಾಧಿಕಾರಿ ಬದಲಾಗಿದ್ದಾರೆ. ಆದ್ದರಿಂದ ನಮ್ಮ ಪಾತ್ರ ಇನ್ನು ಮುಂದೆ ಏನೂ ಇರುವುದಿಲ್ಲ. ಬೇಕಾದರೆ ಸ್ಥಳೀಯವಾಗಿ ಸಹಕಾರ ನೀಡುತ್ತೇವೆ ಎಂದು ಹೇಳಿದರು.
ಆರೋಪಿ ಸ್ಯಾಂಟ್ರೋ ರವಿ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.