ಮೈಸೂರು: ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಸಮಾಜದಲ್ಲಿನ ಮೌಡ್ಯ ಹಾಗೂ ಶೋಷಣೆಗಳಿಂದ ಮಕ್ಕಳನ್ನು ಪಾರುಮಾಡಲು ಪೋಷಕರು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಜಿಲ್ಲಾ ಕುಂಬಾರರ ಮಹಿಳಾ ಸಂಘದಿಂದ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಧರ್ಮದ ಹೆಸರಿನಲ್ಲಿ ಮಕ್ಕಳಿಗೆ ಮೌಡ್ಯ ಹಾಗೂ ಮೂಢನಂಬಿಕೆಗಳನ್ನು ಬಿತ್ತಿ ಮಕ್ಕಳ ಬದುಕನ್ನು ಕತ್ತಲು ಮಾಡಲಾಗುತ್ತದೆ. ಪೋಷಕರು ಈ ಬಗ್ಗೆ ಎಚ್ಚರವಹಿಸುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ವೈಚಾರಿಕ ಚಿಂತನೆ ಬೆಳೆಸಬೇಕು. ಅಲ್ಲದೆ ಶಿಕ್ಷಣ ಸಂಸ್ಥೆಗಳು ಹಾಗೂ ಇನ್ನಿತರ ಸಂಘ-ಸಂಸ್ಥೆಗಳು ಸಹ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ಒದಗಿಸಿ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದರು.
ಇತ್ತೀಚಿನ ಆಧುನಿಕ ಯುಗದಿಂದಾಗಿ ಗುಡಿಕೈಗಾರಿಕೆ, ಕುಂಬಾರಿಕೆ ಸೇರಿದಂತೆ ಅನೇಕ ಕುಲಕಸುಬುಗಳು ನಮ್ಮಿಂದ ದೂರವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಈ ಕುಲಕಸುಬುಗಳನ್ನು ನಂಬಿ ಬದುಕುತ್ತಿರುವ ಸಮುದಾಯಗಳನ್ನು ಸಾಮಾಜಿಕ ಹಾಗೂ ಆರ್ಥಿಕವಾಗಿ ಸದೃಢರನ್ನಾಗಿಸಬೇಕಿದೆ. ಈ ನಿಟ್ಟಿನಲ್ಲಿ ಇಂತಹ ಸಮುದಾಯಗಳು ಉತ್ತಮ ಶಿಕ್ಷಣವನ್ನು ಪಡೆದು ಮುಖ್ಯವಾಹಿನಿಗೆ ಬರಬೇಕಿದೆ.
ಮಕ್ಕಳಿಗೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯವಿರುವ ನೆರವನ್ನು ನೀಡಲು ಸರ್ಕಾರ ಸಿದ್ಧವಿದ್ದು, ಮಕ್ಕಳ ಪ್ರತಿಭೆಗಳನ್ನು ಗುರುತಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕುಂಬಾರ ಸಮುದಾಯದಲ್ಲಿ ಸಮಾಜಮುಖೀ ಕಾರ್ಯಗಳನ್ನು ಮಾಡುತ್ತಿರುವ ಸಾವಿತ್ರಮ್ಮ ನಿಂಗಯ್ಯ ಹಾಗೂ ಶೈಕ್ಷಣಿಕವಾಗಿ ಸಾಧನೆ ಮಾಡಿರುವ ರಚನಾವರ್ಷ, ವರುಣ್ ಸೇರಿದಂತೆ ಹಲವು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮುಖ್ಯ ಎಂಜಿನಿಯರ್ ಶ್ರೀನಿವಾಸ್, ವಿಧಾನ ಪರಿಷತ್ ಸಚಿವಾಲಯದ ಕಾರ್ಯದರ್ಶಿ ಮಂಜುಳಾ, ನಗರ ಪಾಲಿಕೆ ಸದಸ್ಯ ಎಚ್.ಎಸ್.ಪ್ರಕಾಶ್, ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಕೃಷ್ಣಪ್ರಸಾದ್, ನಂಜನಗೂಡು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಕೆ.ಎಂ.ನಾಗರಾಜು, ಕುಂಭಕಲಾ ಅಭಿವೃದ್ಧಿ ಮಂಡಳಿ ಸದಸ್ಯ ಕೇರ್ಗಳ್ಳಿ ನಾಗಣ್ಣ, ಜಿಲ್ಲಾ ಕುಂಬಾರ ಮಹಿಳಾ ಸಂಘದ ಅಧ್ಯಕ್ಷೆ ರೇಣುಕಾಂಬ ಮತ್ತಿತರರಿದ್ದರು.